ಮಂಗಳವಾರ, ಮೇ 16, 2023
ರಾಷ್ಟ್ರೀಯ ಡೆಂಗ್ಯು ದಿನಾಚರಣೆ ನಿಮಿತ್ತ ಜಾಗೃತಿ ಜಾಥಾ
“ಡೆಂಗ್ಯು ಮಹಾಮಾರಿ”ಯ ಜಾಗೃತಿ ಸಾರಿದ ಜಾಥಾ
ಬಳ್ಳಾರಿ,ಮೇ 16(ಕರ್ನಾಟಕ ವಾರ್ತೆ):
ರಾಷ್ಟ್ರೀಯ ಡೆಂಗ್ಯು ದಿನಾಚರಣೆ ಅಂಗವಾಗಿ ನಗರದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಾಗೃತಿ ಜಾಥಾವು ಡೆಂಗ್ಯೂ ಮಹಾಮಾರಿಯ ಕುರಿತು ಜಾಗೃತಿ ಮೂಡಿಸಿತು.
ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಕಚೇರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ “ಎಲ್ಲರ ಸಹಭಾಗಿತ್ವದೊಂದಿಗೆ ಡೆಂಗಿಯನ್ನು ಸೋಲಿಸೋಣ” ಎಂಬ ಘೋಷವಾಕ್ಯದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಜಾಗೃತಿ ಜಾಥಾಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮುಂಬರುವ ಮಳೆಗಾಲ ಹಾಗೂ ನಂತರದ ದಿನಗಳಲ್ಲಿ ಡೆಂಗೀ ನಿಯಂತ್ರಣ ಕ್ರಮಗಳನ್ನು ಸಮುದಾಯದ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಮೂಲಕ ಡೆಂಗೀ ಪ್ರಕರಣಗಳ ನಿಯಂತ್ರಣವನ್ನು ಸಾಧಿಸಬೇಕಿದೆ ಎಂದು ಹೇಳಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ.ಆರ್.ಅಬ್ದುಲ್ಲಾ ಅವರು ಮಾತನಾಡಿ, ಡೆಂಗ್ಯು ನಿಯಂತ್ರಣದಲ್ಲಿ ಸಮುದಾಯದ ಪಾತ್ರ ಪ್ರಮುಖವಾಗಿದ್ದು, ಸೊಂಕಿತ ಈಡೀಸ್ ಈಜಿಪೈ ಸೊಳ್ಳೆ ಕಡಿತದಿಂದ ಹರಡುವ ಡೆಂಗೀ ಜ್ವರವು ವೈರಾಣುಗಳಿಂದ ಉಂಟಾಗುತ್ತದೆ. ಡೆಂಗ್ಯು ಜ್ವರದ ಲಕ್ಷಣಗಳಾದ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ ಆಚಿತರಿಕ ರಕ್ತಸ್ರಾವ, ಒಸಡುಗಳಲ್ಲಿ ರಕ್ತಸ್ರಾವ ಲಕ್ಷಣಗಳು ಕಾಣಿಸಿಕೊಂಡಲ್ಲಿ ತಕ್ಷಣವೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಹಾಗೂ ಎಲ್ಲಾ ಸೇವೆಗಳು ಉಚಿತವಾಗಿರುತ್ತದೆ ಎಂದು ತಿಳಿಸಿದರು.
*ಡೆಂಗೀ ಜ್ವರ ನಿಯಂತ್ರಣಕ್ಕೆ ಅನುಸರಿಸಬೇಕಾದ ಸರಳ ನಿಯಂತ್ರಣ ಕ್ರಮಗಳು:*
ಮನೆಯಲ್ಲಿ ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು ಪುನ: ನೀರು ತುಂಬಿಸುವುದು ಮತ್ತು ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಮನೆಯ ಸುತ್ತ ಮುತ್ತ ಬೀಸಾಡಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಎಲ್ಲಾ ಸರ್ಕಾರಿ/ಖಾಸಗಿ ಕಚೇರಿ ಹಾಗೂ ಸಂಸ್ಥೆಗಳ ಒಳಾಂಗಣ ಹಾಗೂ ಹೊರಾಂಗಣಗಳಲ್ಲಿ ಈಡೀಸ್ ಸೊಳ್ಳೆಯ ಉತ್ಪತ್ತಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಈಡೀಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ, ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವರು, ವಿಶೇಷವಾಗಿ ಮಕ್ಕಳು, ವ್ಲದ್ದರು ಹಾಗೂ ಗರ್ಭಿಣಿಯರು ಸೊಳ್ಳೆ ಪರದೆಯನ್ನು ಬಳಸಬೇಕು. ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಸ್ವಯಂಸೇವಕರು ಮನೆ ಭೇಟಿ ಸಂದರ್ಭದಲ್ಲಿ ಡೆಂಗೀ ನಿಯಂತ್ರಣ ಕುರಿತು ನೀಡುವ ಸಲಹೆಗಳನ್ನು ತಪ್ಪದೇ ಪಾಲಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಮತ್ತು ಶಾಂತಮ್ಮ, ಬಿಹೆಚ್‍ಇಓ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶಕುಂತಲಾ ಮ್ಯಾಳಿ, ವಿರೂಪಾಕ್ಷ, ನಾಗರಾಜ, ರವೀಂದ್ರ ಜಿನಗಾ, ಮರಿಬಸವನಗೌಡ, ಪ್ರಯೋಗಶಾಲಾ ತಂತ್ರಜ್ಞರಾದ ಶಕುಂತಲಾ, ನಂದಿನಿ, ಅಂಬುಜ ಹಾಗೂ ಮಹಾನಗರ ಪಾಲಿಕೆಯ ಕುಮಾರಸ್ವಾಮಿ ಮತ್ತು ಜಿಲ್ಲಾ ವಿಬಿಡಿಸಿ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಜಾಥಾದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಯವರು ಹಾಗೂ ಆಶಾ ಕಾರ್ಯಕರ್ತೆಯರು, ಮಲೇರಿಯಾ ಲಿಂಕ್ ವರ್ಕರ್ಸ್ ಭಾಗವಹಿಸಿದ್ದರು. ಜಾಗೃತಿ ಜಾಥಾವು ವಾಹನದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ನೀಡಲಾಯಿತು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ