ಶುಕ್ರವಾರ, ಜೂನ್ 23, 2023
ಜಿಲ್ಲಾ ಮಟ್ಟದ ಮಟ್ಟದ ಜಾಗೃತಿ ಸಮಿತಿ ಸಭೆ
ಜಿಲ್ಲೆಯ ಎಲ್ಲಾ ಸಫಾಯಿ ಕರ್ಮಚಾರಿಗಳ ಮರು ಸಮೀಕ್ಷೆ ನಡೆಸಿ: ಎಡಿಸಿ ಮೊಹಮ್ಮದ್ ಝುಬೇರಾ
ಬಳ್ಳಾರಿ,ಜೂ.23(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೊಡಗಿಸಿಕೊಂಡಿರುವ ಸಫಾಯಿ ಕರ್ಮಚಾರಿಗಳ ಮರು ಸಮೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮ್ಯಾನುವಲ್ ಸ್ಕ್ಯಾವೆಂಜರ್ಸ್‍ಗಳ ನಿಷೇಧ ಮತ್ತು ಅವರ ಪುನರ್ವಸತಿ ಕಾಯಿದೆ 2013 ರನ್ವಯ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಸಫಾಯಿ ಕರ್ಮಚಾರಿಗಳ ವಸತಿ ಸೌಲಭ್ಯ ಇರುವ ಕುರಿತು ಸರ್ವೆ ಮಾಡಿ, ನಿವೇಶನ ರಹಿತ ಫಲಾನುಭವಿಗಳಿಗೆ ನಿವೇಶನ ಸೌಲಭ್ಯವನ್ನು ಕಲ್ಪಿಸಿಕೊಡುವಂತೆ ಹಾಗೂ ಈ ಹಿಂದೆ ನಿವೇಶನ ಪಡೆದುಕೊಂಡು ಕಾಮಗಾರಿ ಪ್ರಗತಿಯಲ್ಲಿರುವ ಬಾಕಿ ಕಂತಿನ ಹಣ ಬಿಡುಗಡೆಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಸುತ್ತಿರುವ ಪೌರಕಾರ್ಮಿಕರಿಗೆ ಕನಿಷ್ಟ ವೇತನ ಮತ್ತು ಇ.ಎಸ್.ಐ, ಪಿ.ಎಫ್ ಪಾವತಿಯಾಗುತ್ತಿರುವ ಕುರಿತು ಪರಿಶೀಲಿಸಿದರು. ಸಕಾಲದಲ್ಲಿ ಅವರ ಇ.ಎಸ್.ಐ, ಪಿ.ಎಫ್ ಪಾವತಿಯಾಗುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ತೋರುವಂತಿಲ್ಲ ಎಂದರು.
ಜಿಲ್ಲೆಯಲ್ಲಿ ಮಂಜೂರಾದ ಸಮುದಾಯ ಸ್ಯಾನಿಟರಿ ಶೌಚಾಲಯಗಳ ಕಾಮಗಾರಿಗಳು ಪ್ರಾರಂಭಿಸಬೇಕು. ಹಾಗೂ ಈ ಹಿಂದೆ ಅಪೂರ್ಣಗೊಂಡ ಕಾಮಗಾರಿಗಳನ್ನೂ ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಪಂ ವ್ಯಾಪ್ತಿಯ ಎಲ್ಲಾ ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣಾ ಶಿಬಿರ ಮತ್ತು ಸಾಮಾನ್ಯ ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಆರೋಗ್ಯ ಕಾರ್ಡ್ ಮಾಡಿಸಿಕೊಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಕೀನಾ ಅವರು ಸೇರಿದಂತೆ ನಗರಸಭೆ, ಪುರಸಭೆಯ ಅಧಿಕಾರಿಗಳು, ವಿವಿಧ ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ