ಮಂಗಳವಾರ, ಜುಲೈ 11, 2023

ಚೆಳ್ಳಗುರ್ಕಿ ಗ್ರಾಮಕ್ಕೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ಭೇಟಿ ಪರಿಶೀಲನೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಸೂಚನೆ ಬಳ್ಳಾರಿ,ಜು.11(ಕರ್ನಾಟಕ ವಾರ್ತೆ): ರಾಜ್ಯದ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು, ತಾಲೂಕಿನ ಗಡಿಭಾಗದ ಚೆಳ್ಳಗುರ್ಕಿ ಗ್ರಾಮಕ್ಕೆ ಜುಲೈ 13 ರಂದು ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರದಂದು ಜಿಲ್ಲಾಧಿಕಾರಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 11 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಲಿದ್ದಾರೆ. ನಂತರ ಅಂತರ್‍ರಾಜ್ಯ ಗಡಿಗ್ರಾಮ ಚೆಳ್ಳಗುರ್ಕಿ ಗ್ರಾಮಕ್ಕೆ ಭೇಟಿ ನೀಡಿ, ದೇವಸ್ಥಾನದ ಮುಂಭಾಗ ಸರಕಾರದ ಯೋಜನೆಗಳ ಅನುಷ್ಠಾನದ ಕುರಿತು ಸಾರ್ವಜನಿಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಯೋಜನೆಗಳ ಅನುಷ್ಠಾನ ಮಾಹಿತಿ ಮತ್ತು ಸೌಲಭ್ಯ ಪಡೆದುಕೊಂಡ ಫಲಾನುಭವಿಗಳ ಮಾಹಿತಿಯೊಂದಿಗೆ ಇರಬೇಕು ಎಂದು ಹೇಳಿದರು. ಗ್ರಾಮಕ್ಕೆ ಅಗತ್ಯ ರಸ್ತೆ ಸೌಲಭ್ಯದ ಬಗ್ಗೆ ಪರಿಶೀಲಿಸಬೇಕು. ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ವಚ್ಛತೆ ಬಗ್ಗೆ ನಿಗಾವಹಿಸಬೇಕು. ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಅಲ್ಲಿ ಸರಕಾರಿ ಯೋಜನೆಗಳು ಅನುಷ್ಠಾನದ ಕುರಿತು ಜನಸಾಮಾನ್ಯರ ಜೊತೆ ಮುಕ್ತವಾಗಿ ಚರ್ಚಿಸಲಿದ್ದಾರೆ. ಸರ್ಕಾರಿ ಶಾಲೆಗೆ ಭೇಟಿ ನೀಡಿ ಅಲ್ಲಿನ ಕಲಿಕಾ ಮಾದರಿ ಹಾಗೂ ಮೂಲಭೂತ ಸೌಲಭ್ಯ ಬಗ್ಗೆ ಪರಿಶೀಲನೆ ನಡೆಸಲಿದ್ದು, ಶಾಲೆಯ ವಾತವರಣ ಸ್ವಚ್ಛವಾಗಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಪೂರಕ ವಿದ್ಯುತ್ ಸೌಲಭ್ಯ ಸೇರಿದಂತೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯಿಂದ ಸೌಲಭ್ಯ ಪಡೆದುಕೊಂಡ ಫಲಾನುಭವಿಗಳ ಮಾಹಿತಿ ವರದಿ ಸಲ್ಲಿಸುವಂತೆ ತಿಳಿಸಿದರು. ಅಧಿಕಾರಿಗಳು ಗ್ರಾಮದಲ್ಲಿ ಕಾರ್ಯಗತಗೊಂಡ ಸೌಲಭ್ಯಗಳನ್ನು ವೀಕ್ಷಿಸಲು ಮುಂಚಿತವಾಗಿಯೇ ಗ್ರಾಮಕ್ಕೆ ಭೇಟಿ ನೀಡಬೇಕು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಜಿಪಂನ ಉಪಕಾರ್ಯದರ್ಶಿ ಶರಣ ಬಸವರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ