ಮಂಗಳವಾರ, ಜುಲೈ 11, 2023

ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಜಿಲ್ಲಾಮಟ್ಟದ ಜಾಗೃತಿ ಜಾಥಾ ಕಾರ್ಯಕ್ರಮ ಜನಸಂಖ್ಯಾ ನಿಯಂತ್ರಣಕ್ಕೆ ಸಮುದಾಯದ ಸಹಭಾಗಿತ್ವ ಅಗತ್ಯ: ಶರಣಬಸಪ್ಪ ಗಣಜಲಖೇಡ ಬಳ್ಳಾರಿ,ಜು.11(ಕರ್ನಾಟಕ ವಾರ್ತೆ): ಜನಸಂಖ್ಯಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯ ಯೋಜನೆಗಳ ಜೊತೆಗೆ ಜನ ಸಮುದಾಯವು ಸಕ್ರಿಯವಾಗಿ ಭಾಗವಹಿಸಿದ್ದಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ದೇಶದ ಜನಸಂಖ್ಯೆಯನ್ನು ನಿಯಂತ್ರಣ ಮಾಡಲು ಸಾಧ್ಯವಿದೆ ಎಂದು ಕಲಬುರ್ಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ನಿರ್ದೇಶನಾಲಯದ ಉಪನಿರ್ದೇಶಕ ಶರಣಬಸಪ್ಪ ಗಣಜಲಖೇಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಟುಂಬ ಕಲ್ಯಾಣ ಕಾರ್ಯಕ್ರಮ ವಿಭಾಗ, ಜಿಲ್ಲಾ ಆಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ಮಂಗಳವಾರದಂದು ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಆರೋಗ್ಯ ಇಲಾಖೆ ಅಡಿಯಲ್ಲಿರುವ ಕುಟುಂಬ ಕಲ್ಯಾಣ ವಿಧಾನಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಮೂಲಕ ಮಗುವಿನ ಜನನದ ನಡುವೆ ಅನುಸರಿಸುವ ಮೂಲಕ ಚಿಕ್ಕ ಸಂಸಾರಕ್ಕೆ ಆದ್ಯತೆ ನೀಡಲು ಪ್ರತಿಯೊಬ್ಬರು ಮುಂದೆ ಬರಬೇಕು ಎಂದು ಕರೆ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಪೂರ್ಣಿಮ ಕಟ್ಟಿಮನಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜನಸಂಖ್ಯೆ ನಿಯಂತ್ರಣ ಸಲುವಾಗಿ ಪ್ರತಿ ಹಳ್ಳಿಯ ಆರೋಗ್ಯ ಕೇಂದ್ರದಲ್ಲಿ ಐಇಸಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಮದುವೆಯಾದ ಮೊದಲ 2 ವರ್ಷಗಳ ಅವಧಿಗೆ ತಾತ್ಕಾಲಿಕ ವಿಧಾನಗಳನ್ನು ಬಳಸಬೇಕು ಹಾಗೂ ಮೊದಲ ಜನನದ ನಂತರ ಮುಂದಿನ ಮಗುವಿಗೆ ಕನಿಷ್ಠ 3 ವರ್ಷಗಳ ಅಂತರಕ್ಕಾಗಿ ಆರೋಗ್ಯ ಇಲಾಖೆಯ ತಿಳಿಯಪಡಿಸುವ ವಿಧಾನ ಅನುಸರಿಸಬೇಕು ಎಂದರು. ನಂತರದ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಬಸರೆಡ್ಡಿ, ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಗುರುನಾಥ್ ಬಿ.ಚೌವ್ಹಾಣ್, ಜಿಲ್ಲಾ ಕುಟುಂಬ ಕಲ್ಯಾಣ ಅನುಷ್ಟಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಮರಿಯಂಬಿ.ವಿ.ಕೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ.ಹೆಚ್ ದಾಸಪ್ಪನವರ ಸೇರಿದಂತೆ ಜಾಥಾದಲ್ಲಿ ನಗರ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದ ಪ್ರಶಿಕ್ಷಣಾರ್ಥಿಗಳು ಹಾಗೂ ಇತರರು ಹಾಜರಿದ್ದರು. ಜಾಥಾವು ಜಾಗೃತಿ ಫಲಕಗಳಿಂದ ಜಿಲ್ಲಾ ಆಸ್ಪತ್ರೆಯ ಆವರಣದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗಿ ಸಂಗಂ ವೃತ್ತದ ಮೂಲಕ ಗಡಿಗಿ ಚೆನ್ನಪ್ಪ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಮರಳಿ ಜಿಲ್ಲಾ ಆಸ್ಪತ್ರೆಯ ಆವರಣಕ್ಕೆ ಕೊನೆಗೊಂಡಿತು. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ