ಮಂಗಳವಾರ, ಜುಲೈ 18, 2023

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ 'ಧೂಮಪಾನ ಪ್ರದೇಶ' ಸ್ಥಾಪಿಸುವಂತೆ ಕಟ್ಟುನಿಟ್ಟಿನ ಸೂಚನೆ: ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಬಳ್ಳಾರಿ,ಜು.18(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿರುವ 30 ಆಸನಗಳ ಮೇಲ್ಪಟ್ಟ ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೋಟ್ಪಾ ಕಾಯ್ದೆಯ ಅನುಸಾರ ನಾಮಫಲಕ ಅಳವಡಿಸುವುದರ ಜೊತೆಗೆ ಎಲ್ಲಿ ಅಗತ್ಯವಿದೆಯೋ ಅಲ್ಲಿ ಧೂಮಪಾನ ನಿಗದಿಪಡಿಸಿದ ಪ್ರದೇಶಗಳನ್ನು ಸ್ಥಾಪಿಸಬೇಕು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೋಟ್ಪಾ ಕಾಯ್ದೆಯ ಅನುಸಾರ ಕಟ್ಟುನಿಟ್ಟಿನ ಸೂಚನೆ ನೀಡಿದಾಗಿಯೂ ನಿರ್ಲಕ್ಷ್ಯ ಮುಂದುವರಿಸಿದ್ದಲ್ಲಿ ಅವರ ಮೇಲೆ ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. ಜಿಲ್ಲೆಯಲ್ಲಿ 30 ಆಸನಗಳ ಮೇಲ್ಪಟ್ಟ 109 ಬಾರ್ ಮತ್ತು ರೆಸ್ಟೋರೆಂಟ್‍ಗಳಿದ್ದು, ಅದರಲ್ಲಿ 36 ಬಾರ್ ಮತ್ತು ರೆಸ್ಟೋರೆಂಟ್‍ಗಳು ಕೋಟ್ಪಾ ಕಾಯ್ದೆಯ ಅನುಸಾರ ಧೂಮಪಾನ ಪ್ರದೇಶಗಳನ್ನು ಸ್ಥಾಪಿಸಲಾಗಿದೆ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು. ಅಂಗಡಿ, ಹೋಟಲ್, ಬೇಕರಿ, ಲಾಡ್ಜ್, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಇತರೇ ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕೋಟ್ಪಾ ಕಾಯ್ದೆಗೆ ಸಂಬಂಧಿಸಿದ ಸೆಕ್ಷನ್-4 ಮತ್ತು ಸೆಕ್ಷನ್-6ಎ ನಾಮಫಲಕಗಳನ್ನು ಹಾಕಬೇಕು; ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು;ನಾಮಫಲಕ ಹಾಕದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿ ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು. ಜಿಲ್ಲೆಯಲ್ಲಿ ಬರುವ ಒಟ್ಟು 1269 ಶಾಲೆಗಳಲ್ಲಿ 1222 ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳನ್ನಾಗಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದ 47 ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳಾಗಿ ಘೋಷಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು. ಜಿಲ್ಲೆಯಲ್ಲಿರುವ ಆಹಾರಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 2903 ಪರವಾನಿಗೆ ಪಡೆದ ಅಂಗಡಿ, ಬೇಕರಿ, ಹೋಟೆಲ್ ಗಳಿದ್ದು, ಅವುಗಳಲ್ಲಿ 1407 ಸೆಕ್ಷನ್ - 4 ನಾಮಫಲಕ ಅಳವಡಿಸಲಾಗಿದೆ ಹಾಗೂ ಬಾಕಿ ಉಳಿದ 686 ಸ್ಥಳಗಳಲ್ಲಿ ನಾಮಫಲಕ ಅಳವಡಿಸಲಾಗುವುದು ಎಂದು ಆಹಾರ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು. *ಗ್ರಾಮಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ ಸ್ಥಾಪಿಸಿ:* ಜಿಲ್ಲೆಯಲ್ಲಿರುವ ಎಲ್ಲಾ ಗ್ರಾಪಂಗಳಲ್ಲಿ ಹಾಗೂ ಗ್ರಾಮಗಳಲ್ಲಿ ತಂಬಾಕು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಬೇಕು ಎಂದು ಜಿಪಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಕೋಟ್ಪಾ-2003ರ ಸೆಕ್ಷನ್ 4,5,6ಎ ಮತ್ತು 7ರ ಅನುಷ್ಠಾನಗೊಳಿಸಬೇಕು. ಹಾಗೂ ಕಾರ್ಯಾಚರಣೆ ನಡೆಸಿ ದಂಡ ಸಂಗ್ರಹಿಸುವಂತೆ ಅವರು ಸೂಚಿಸಿದರು. ಈ ಬಾರಿಯ ಜಿಲ್ಲೆಯ ತಂಬಾಕು ಮುಕ್ತ ಗ್ರಾಮವನ್ನು ಕುರುಗೋಡು ತಾಲೂಕಿನ 'ದಮ್ಮೂರು' ಗ್ರಾಮವಾಗಿದೆ ಎಂದು ಎಡಿಸಿ ಅವರು ಹೇಳಿದರು. ಕೋಟ್ಪಾ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆಸುವ ಕಾರ್ಯಾಚರಣೆಗಳಲ್ಲಿ ಸಮಿತಿ ಸದಸ್ಯರಾಗಿರುವ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಪಾಲ್ಗೊಳ್ಳಬೇಕು ಎಂದು ಹೇಳಿದರು. ಕೋಟ್ಪಾ ಕಾಯ್ದೆಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ತಂಬಾಕು ನಿಯಂತ್ರಣ ಕುರಿತು ಪೆÇೀಸ್ಟರ್ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜನಾರ್ಧನ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ, ಜಿಪಂ ಯೋಜನಾ ನಿರ್ದೇಶಕ ಪ್ರಮೋದ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ