ಶುಕ್ರವಾರ, ಆಗಸ್ಟ್ 11, 2023

ಡಿ.ದೇವರಾಜು ಅರಸುರವರ 108ನೇ ಜನ್ಮದಿನ ಆಚರಣೆ ನಿಮಿತ್ತ ಪೂರ್ವಭಾವಿ ಸಭೆ, ಜಿಲ್ಲಾಡಳಿತದಿಂದ ಆ.20 ರಂದು ಡಿ.ದೇವರಾಜ ಅರಸು ಅವರ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮೊಹಮ್ಮದ್ ಜುಬೇರ್

ಬಳ್ಳಾರಿ,ಆ.11(ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಅವರು ಹೇಳಿದರು. ಶುಕ್ರವಾರದಂದು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಗಸ್ಟ್ 20 ರಂದು ಬೆಳಿಗ್ಗೆ 10.30 ಕ್ಕೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಬಿಡಿಎಎ ಫುಟ್ಬಾಲ್ ಮೈದಾನ ವೇದಿಕೆ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಸಂಘ ಸಂಸ್ಥೆಯ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹಿಂದುಳಿದ ವರ್ಗಗಳ ಹರಿಕಾರರಾಗಿರುವ ಡಿ.ದೇವರಾಜು ಅರಸು ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು. ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಪದವಿ ಮಟ್ಟದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹನೀಯರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ತಿಳಿಸಿದ ಅವರು, ವಿಶೇಷ ಸಂಪನ್ಮೂಲ ವ್ಯಕ್ತಿಗಳಿಂದ ಡಾ.ದೇವರಾಜು ಅರಸು ಕುರಿತು ವಿಶೇಷ ಉಪನ್ಯಾಸ ಆಯೋಜನೆ ಮಾಡಬೇಕು ಎಂದು ಹೇಳಿದರು. ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಆರ್.ಸುರೇಶ್ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು ಉಪಸ್ಥಿತರಿದ್ದರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ