ಶುಕ್ರವಾರ, ಸೆಪ್ಟೆಂಬರ್ 1, 2023

ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಜನನ-ಮರಣ ನೊಂದಣಿ ತ್ವರಿತವಾಗಿ ಪೂರ್ಣಗೊಳಿಸಲು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಬಳ್ಳಾರಿ,ಸೆ.01(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿನ ಎಲ್ಲಾ ತಾಲೂಕುವಾರು ಆಸ್ಪತ್ರೆಗಳಲ್ಲಿನ ಜನನ ಮತ್ತು ಮರಣ ದಾಖಲೆಗಳ ನೊಂದಣಿಗಳು, ಬೆಳೆಕಟಾವು ಪ್ರಯೋಗಗಳು, ಬೆಳೆ ಕ್ಷೇತ್ರಗಳ ಮರುಹೊಂದಾಣಿಕೆ ಕುರಿತು ಸಮರ್ಪಕವಾದ ಮಾಹಿತಿಯ ನೊಂದಣಿ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಇಲಾಖೆಗಳ ಅಧಿಕಾರಗಳೊಂದಿಗೆ ಮತ್ತು ಆಯಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಜನನ ಮತ್ತು ಮರಣ ನೋಂದಣಿಯನ್ನು ಇ-ಜನ್ಮ ತಂತ್ರಾಂಶದಲ್ಲಿ 2015ರಿಂದ ನೋಂದಣಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಜನನ ಮತ್ತು ಮರಣ ಸಂಭವಿಸಿದಲ್ಲಿ ಪ್ರಮಾಣ ಪತ್ರ ಪಡೆಯಲು 21 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ನೊಂದಣಿ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಬೇಕು. ಸಾರ್ವಜನಿಕರು ಅಲೆದಾಡುವಿಕೆಯನ್ನು ತಪ್ಪಿಸಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ 21 ಸಾವಿರಕ್ಕೂ ಹೆಚ್ಚು ಮಕ್ಕಳು ಆಧಾರ್‍ಕಾರ್ಡ್ ಮಾಡಿಸಿರುವುದಿಲ್ಲ ಹಾಗೂ ಶಾಲೆಗಳಲ್ಲಿ ವಿಧ್ಯಾರ್ಥಿಗಳಿಗೆ 371 ಜೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರುವುದಿಲ್ಲ ಎಂದು ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ, ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಯವರು, ಸರ್ಕಾರಿ ಸೌಲಭ್ಯ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಪಡೆಯಲು ಆಧಾರ್ ಸೇರಿದಂತೆ ಇತರೆ ಪ್ರಮಾಣ ಪತ್ರಗಳು ಮುಖ್ಯವಾಗುತ್ತವೆ. ಆದ್ದರಿಂದ ಆಯಾ ತಾಲೂಕಿನ ತಹಶೀಲ್ದಾರರು ಈ ಬಗ್ಗೆ ಕ್ರಮ ವಹಿಸಬೇಕು. ಶಾಲಾ ಮಟ್ಟದಲ್ಲಿ ಶಾಲೆಯ ಮುಖ್ಯಗುರುಗಳು ಆಧಾರ್, 371 ಜೆ, ಜಾತಿ ಮತ್ತು ಆದಾಯ ಪ್ರಮಾಣ ಹೊಂದಿಲ್ಲದವರ ಮಾಹಿತಿ ಸಂಗ್ರಹಿಸಲು ಸಭೆ ನಡೆಸಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲೆಯ ಐದು ತಾಲೂಕಿನ ತಹಶೀಲ್ದಾರರು, ತಮ್ಮ ವ್ಯಾಪ್ತಿಯ ಶಾಲೆ, ಆಸ್ಪತ್ರೆ ಹಾಗೂ ವಸತಿ ನಿಲಯಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ವರದಿ ಮಾಡಿ ಸಲ್ಲಿಸಬೇಕು. ಮುಖ್ಯವಾಗಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಗುಣಮಟ್ಟ ಆಹಾರ ಪರೀಕ್ಷಿಸಬೇಕು. ಯಾವುದೇ ಸಮಸ್ಯೆ ಉಲ್ಬಣವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಮುಂಗಾರು ಮತ್ತು ಹಿಂಗಾರು ಬೆಳೆಗಳ ಕಟಾವು ಸಂಬಂಧಿಸಿದಂತೆ ಕೈಗೊಂಡಿರುವ ಪ್ರಯೋಗಗಳು ಮತ್ತು ಅದರ ವರದಿಗಳು ಹಾಗೂ ತೋಟಗಾರಿಕೆ ಮತ್ತು ಕೃಷಿ ಇಲಾಖೆ ಸಂಬಂಧಪಟ್ಟಂತೆ ಇತರೆ ಅಂಕಿ-ಅಂಶಗಳ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆಯಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಕೆಲ ಸಲಹೆ-ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಸಹಾಯಕ ಆಯುಕ್ತರಾದ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ