ಶನಿವಾರ, ಸೆಪ್ಟೆಂಬರ್ 30, 2023
ಪದವೀಧರ ಮತದಾರರ ನೋಂದಣಿ ಕಾರ್ಯ ಆರಂಭ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು, ಅರ್ಹ ಪದವೀಧರರು ಮತದಾರರ ಪಟ್ಟಿಗೆ ನೊಂದಾಯಿಸಿಕೊಳ್ಳಬಹುದು ಎಂದು ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಸಹಾಯಕ ಮತದಾರ ನೋಂದಣಾಧಿಕಾರಿಯಾಗಿರುವ ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‍ಸಾಬ್ ಅವರು ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗವು, ಕರ್ನಾಟಕ ಈಶಾನ್ಯ ಪದವೀಧರ ಮತಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ ಎಂದು ನಿರ್ದೇಶನ ನೀಡಿದ್ದಾರೆ.
*ವೇಳಾಪಟ್ಟಿ:*
ನ.06 ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನ, ನ.23 ಕರಡು ಮತದಾರರ ಪಟ್ಟಿ ಪ್ರಕಟಣೆ, ನ.23 ರಿಂದ ಡಿ.12ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಡಿ.30 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.
*ಮಾರ್ಗಸೂಚಿಗಳು:*
2023ರ ನ.01 ಕ್ಕೆ 3 ವರ್ಷಗಳ ಪೂರ್ವದಲ್ಲಿ ಅಂದರೆ 2020ರ ನ.01 ರ ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. 2020ರ ನ.01 ಕ್ಕಿಂತ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗದಿಪಡಿಸಿದ ನಮೂನೆ-18 ರಲ್ಲಿ (ಭಾವ ಚಿತ್ರದೊಂದಿಗೆ) ಭರ್ತಿಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ಉತ್ತೀರ್ಣರಾಗಿರುವ ಅಂಕಪಟ್ಟಿ, ಆಧಾರ್‍ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸ್ಥಳದ ದಾಖಲೆಗಳನ್ನು ಸ್ವಯಂಧೃಡೀಕರಿಸಿ, ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ನ.06ರ ಒಳಗಾಗಿ ಮತದಾರರ ನೊಂದಣಾಧಿಕಾರಿಗಳು/ಸಹಾಯಕ ಮತದಾರರ ನೋಂದಣಾಧಿಕಾರಿಗಳು/ಸಂಬಂಧಪಟ್ಟ ವಿಧಾನಸಭಾ ಮತಕೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರರ ಕಾರ್ಯಾಲಯದಲ್ಲಿ) ಸಲ್ಲಿಸಬಹುದು.
ಕರ್ನಾಟಕ ಈಶಾನ್ಯ ಪದವೀಧರರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರರ ಕಾರ್ಯಾಲಯದಲ್ಲಿ) ನಿಗದಿಪಡಿಸಿದ ಕಾಲಮಿತಿಯೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಹ ಪದವೀಧರರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು, ಸುಭದ್ರ ಹಾಗೂ ಪ್ರಜಾಪ್ರಭುತ್ರ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ