ಮಂಗಳವಾರ, ಸೆಪ್ಟೆಂಬರ್ 26, 2023

ಕಂಪ್ಲಿ ಮತ್ತು ಕುರುಗೋಡು ತಾಲೂಕುಗಳ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಕಾಳ ಸಂತೆಯಲ್ಲಿ ಮೆಣಸಿನ ಕಾಯಿ ಬೀಜ ಮಾರುವರರ ವಿರುದ್ಧ ಕ್ರಮ ಅಧಿಕಾರಿಗಳು ಸಾರ್ವಜನಿಕ ಸೇವೆ ಸಲ್ಲಿಸಿ: ಸಚಿವ ಬಿ.ನಾಗೇಂದ್ರ ಸೂಚನೆ

ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ರೈತರು ಆದಾಯಕ್ಕನುಗುಣವಾಗಿ ಮೆಣಸಿನ ಕಾಯಿ ಬೆಳೆಯನ್ನೇ ಅವಲಂಬಿಸಿದ್ದಾರೆ. ಆದರೆ ದುಪ್ಪಟ್ಟು ದರದಲ್ಲಿ ಮೆಣಸಿನ ಕಾಯಿ ಬೀಜ ಮಾಡುತ್ತಿರುವುದು ಕಂಡು ಬಂದಿದೆ. ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳು ಪತ್ತೆಹಚ್ಚಬೇಕು. ಅಂತವಹರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಯುವಜನ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಖಡಕ್ ಸೂಚನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕುರುಗೋಡು ಇವರ ಸಂಯುಕ್ತಾಶ್ರಯದಲ್ಲಿ ಕುರುಗೋಡು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಸೋಮವಾರದಂದು ನಡೆದ ಕಂಪ್ಲಿ ಮತ್ತು ಕುರುಗೋಡು ತಾಲೂಕುಗಳ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಂಪ್ಲಿ ಮತ್ತು ಕುರುಗೋಡು ತಾಲೂಕುಗಳಲ್ಲಿ ರೈತರು ಬಹುಪಾಲು ಮೆಣಸಿನ ಕಾಯಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ ರೈತರಿಗೆ ಬೆಳೆಯ ಆರೈಕೆ ಕುರಿತು ಮಾಹಿತಿ ಸಿಗುತ್ತಿಲ್ಲ. ಅಧಿಕಾರಿಗಳು ಕ್ಷೇತ್ರ ಭೇಟಿ ನಡೆಸಬೇಕು. ಬೆಳೆ ನಿರ್ವಹಣೆ ಕುರಿತು ಮಾಹಿತಿ ನೀಡಬೇಕು. ರೈತ ಸಂಪರ್ಕ ಕೇಂದ್ರಗಳಿಗೆ ರೈತರು ಭೇಟಿ ನೀಡುವಂತೆ ಅವರಿಗೆ ತಿಳಿಸಬೇಕು ಎಂದು ಹೇಳಿದರು. ಈಗಾಗಲೇ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದ್ದು, ಕೃಷಿ, ತೋಟಗಾರಿಕೆ ಹಾಗೂ ಇನ್ಸೂರೆನ್ಸ್ ಕಂಪನಿಯವರು ಜಂಟಿಯಾಗಿ ಈ ಭಾಗದ ನಿಜ ಬೆಳೆ ಹಾನಿ ಸಮೀಕ್ಷೆ ಆದಷ್ಟುತ್ವರಿತವಾಗಿ ನಡೆಸಿ, ನೈಜ ವರದಿಯನ್ನು ನೀಡಬೇಕು. ಈ ತಿಂಗಳ ಅಂತ್ಯದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಬೆಳೆ ವಿಮೆಗೆ ಹೆಚ್ಚೆಚ್ಚು ರೈತರು ನೋಂದಾಯಿಸಿಕೊಳ್ಳುವಂತೆ ಅವರಿಗೆ ತಿಳಿಸಬೇಕು. ಬರ ಪರಿಹಾರಕ್ಕೆ ಅರ್ಹ ರೈತರನ್ನೇ ಪರಿಗಣಿಸಬೇಕು ಎಂದರು. ಕಂಪ್ಲಿ ಮತ್ತು ಕುರುಗೋಡು ತಾಲೂಕುಗಳಲ್ಲಿ ವಾಡಿಕೆಗಿಂತ ಶೇ.68ರಷ್ಟು ಮಳೆ ಕೊರತೆಯಾಗಿದೆ. ಈಗಾಗಲೇ ಈ ಭಾಗದ 280 ಹೆಕ್ಟೇರ್ ಪ್ರದೇಶ ಬರ ಪೀಡಿತ ಸಮೀಕ್ಷೆಗೆ ಒಳಪಟ್ಟಿದ್ದು, ಇನ್ನುಳಿದ ಪ್ರದೇಶವನ್ನು ನಿಜ ಸಮೀಕ್ಷೆ ಕೈಗೊಂಡು ಸೆ.30 ರೊಳಗಾಗಿ ವರದಿ ಸಲ್ಲಿಸಲಾಗುವುದು ಎಂದು ಕೃಷಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಕುರುಗೋಡು ತಾಲೂಕಿನಲ್ಲಿ 1 ಸಮುದಾಯ ಆರೋಗ್ಯ ಕೇಂದ್ರ, ಕೋಳೂರು, ಓರ್ವಾಯಿ, ಸಿದ್ದಮನಹಳ್ಳಿ ಸೇರಿದಂತೆ 3 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇವೆ. ಆದರೂ ರಾತ್ರಿ ಸಮಯದಲ್ಲಿ ವೈದ್ಯರು ಇರುವುದಿಲ್ಲ. ಆ ಸಮಯದಲ್ಲಿ ಏನಾದರೂ ದುರ್ಘಟನೆ ಸಂಭವಿಸಿದರೆ ಯಾರ ಹೊಣೆ ಎಂದು ಪ್ರಶ್ನಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ವೈದ್ಯರು ನಿಗದಿಪಡಿಸಿದ ಸಮಯದಲ್ಲಿಯೇ ಇದ್ದುಕೊಂಡು, ಸಾರ್ವಜನಿಕರನ್ನು ಉಪಚರಿಸಬೇಕು. ಪ್ರತಿಯೊಂದಕ್ಕೂ ನಗರಕ್ಕೆ ಕಳುಹಿಸಿಕೊಡಬಾರದು. ಅಗತ್ಯ ಔಷದ ದಾಸ್ತಾನು ಸಂಗ್ರಹಣೆ ಇಟ್ಟುಕೊಳ್ಳಬೇಕು ಎಂದು ಹೇಳಿದರು. ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಮಾತನಾಡಿ, ಸಿದ್ದಮನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಂಪೌಂಡ್ ವ್ಯವಸ್ಥೆ ಇರುವುದಿಲ್ಲ. ಸಾರ್ವಜನಿಕರ ತಾಣವಾಗಿ ಮಾರ್ಪಟ್ಟಿದೆ. ಅನುದಾನದ ಅಗತ್ಯವಿದ್ದಲ್ಲಿ ಗಮನಕ್ಕೆ ತನ್ನಿ ಎಂದು ಹೇಳಿದರು. ಮುಖ್ಯವಾಗಿ ಕಂಪ್ಲಿ ಭಾಗದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನರ್ಸ್‍ಗಳು, ಹಣ ಪಡೆದುಕೊಂಡು ಚಿಕಿತ್ಸೆಗೆ ಶಿಫಾರಸ್ಸು ಮಾಡುವುದು ಕಂಡುಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಂತಹವರಿಗೆ ತಕ್ಷಣ ನೋಟಿಸ್ ಜಾರಿ ಮಾಡುವಂತೆ ತಾಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು, ಕಂಪ್ಲಿ ಮತ್ತು ಕುರುಗೋಡು ತಾಲೂಕುಗಳಿಗೆ 100 ಬೆಡ್ ವ್ಯವಸ್ಥೆಯ ಆಸ್ಪತ್ರೆ ಮಂಜೂರು ಮಾಡಬೇಕು ಎಂದು ಪ್ರಸ್ತಾಪಿಸಿದರು. ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಜೊತೆ ಚರ್ಚಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ಈ ಭಾಗದಲ್ಲಿ ಸದ್ಯದ ಮಟ್ಟಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಡಿಸೆಂಬರ್ ಅಂತ್ಯದೊಳಗೆ ಸಮಸ್ಯೆ ತಲೆದೋರಬಹುದು. ಇದಕ್ಕೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು. ನೀರಿನ ಸೋರುವಿಕೆ ತಡೆಗಟ್ಟಬೇಕು. ಓವರ್ ಹೆಡ್ ಟ್ಯಾಂಕ್ ಗಳನ್ನು ಒಂದುವರೆ ತಿಂಗಳಿಗೊಮ್ಮೆ ಸ್ವಚ್ಚಗೊಳಿಸಿ, ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ ನಂತರ ಕುಡಿಯಲು ಸರಬರಾಜು ಮಾಡಬೇಕು. ಇದೇ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಕಲುಷಿತ ನೀರು ಸೇವನೆ ಪ್ರಕರಣ ಮಾಹಿತಿ ಸಚಿವರು ತಿಳಿಸಿದರು. ಕಂಪ್ಲಿ ಮತ್ತು ಕುರುಗೋಡು ತಾಲೂಕುಗಳ 24 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆಗೆ ಒಳಪಡುತ್ತವೆ. ಇದಕ್ಕೆ ಮುಂಜಾಗ್ರತೆಯಾಗಿ ಗ್ರಾಪಂ ಅನುದಾನದಲ್ಲಿ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ವಿಭಾಗದ ಅಧಿಕಾರಿ ಸಭೆಗೆ ತಿಳಿಸಿದರು. ರೈತರಿಗೆ ಬೆಳೆಗಳಿಗೆ ನೀರು ಹರಿಸಲು ವಿದ್ಯುತ್ ಸಮಸ್ಯೆ ತಲೆದೋರಬಾರದು. ವಿದ್ಯುತ್ ಪರಿವರ್ತಕಗಳು ಸುಟ್ಟಾಗ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸುವ ಹಿನ್ನಲೆಯಲ್ಲಿ ಜೆಸ್ಕಾಂ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ದಮ್ಮೂರು ಗ್ರಾಮದಲ್ಲಿ ನಡೆದ ದುರ್ಘಟನೆ ಮರುಕಳಿಸಬಾರದು ಎಂದು ತಿಳಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಈ ಭಾಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯಿದೆ ಪ್ರಕರಣ ಸೃಷ್ಟಿಗೆ ಅವಕಾಶ ನೀಡಬಾರದು ಎಂದರು. ಕುರುಗೋಡು ಮತ್ತು ಬಳ್ಳಾರಿ ತಾಲೂಕು ಭಾಗದ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯು ಇಲ್ಲಿಯೇ ಇದ್ದು, ಶಾಲಾ ಮಕ್ಕಳಿಗೆ ಅನುಕೂಲಕ್ಕಾಗಿ ಪ್ರತ್ಯೇಕಿಸಬೇಕು ಎಂದು ತಹಶೀಲ್ದಾರ ರಾಘವೇಂದ್ರ ಅವರು, ಸಭೆಯ ಗಮನ ಸೆಳೆದರು. ಇದಕ್ಕೆ ಸಚಿವರು ಪ್ರತಿಕ್ರಿಯಿಸಿ, ಇದೊಂದು ಒಳ್ಳೆಯ ನಿರ್ಧಾರವಾಗಿದ್ದು, ಈ ಕುರಿತು ಚರ್ಚಿಸಲಾಗುವುದು ಎಂದರು. ವಾಲ್ಮೀಕಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭವನಗಳನ್ನು ಕೇವಲ ವೇದಿಕೆ ಕಾರ್ಯಕ್ರಮಗಳಿಗೆ ಬಳಸಬಾರದು. ಬದಲಾಗಿ, ಅದರಲ್ಲಿ ಪ್ರತ್ಯೇಕವಾಗಿ ಕಾರ್ನರ್ ಮಾಡಿ, ಪುಸ್ತಕಗಳನ್ನು ಸಂಗ್ರಹಿಸಿಡುವ ಮೂಲಕ, ಮಾದರಿ ಗ್ರಂಥಾಲಯಗಳನ್ನು (ಈ - ಲೈಬ್ರರಿ ಒಳಗೊಂಡು) ಸ್ಥಾಪಿಸಬೇಕು. ಇದಕ್ಕೆ ಬೇಕಾದ ಅನುದಾನ, ಇತರೆ ವ್ಯವಸ್ಥೆ ಒದಗಿಸಲಾಗುವುದು. ಇದರಿಂದ ವಿದ್ಯಾರ್ಥಿಗಳಿಗೆ, ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಅನುಕೂಲವಾಗಲಿದೆ. ಇದರ ಬಗ್ಗೆ ಈಗಾಗಲೇ ಸರ್ಕಾರ ಮಟ್ಟದಲ್ಲಿ ಚರ್ಚೆ ನಡೆಸಲಾಗಿದೆ ಎಂದು ನಾಗೇಂದ್ರ ಅವರು ತಿಳಿಸಿದರು. ಅಧಿಕಾರಿಗಳು ಸಣ್ಣ-ಪುಟ್ಟ ಸಮಸ್ಯೆಗಳನ್ನು ತಮ್ಮ ಮಟ್ಟದಲ್ಲಿಯೇ ಬಗೆಹರಿಸಬೇಕು. ಸಾರ್ವಜನಿಕರಿಗೆ ಇವು ದೊಡ್ಡ ಸಮಸ್ಯೆಗಳಾಗಿರುತ್ತವೆ. ಪ್ರತಿಯೊಬ್ಬರೂ ಸಾರ್ವಜನಿಕ ಸೇವೆ ಒದಗಿಸಬೇಕು. ಈ ನಿಟ್ಟಿನಲ್ಲಿಯೇ ಮುಖ್ಯಮಂತ್ರಿಗಳ ಆಶಯದಂತೆ ಜನತಾ ದರ್ಶನ ಕಾರ್ಯಕ್ರಮ ರೂಪಿಸಲಾಗಿದೆ ಎಂದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಕುರಿತು ಸುಧೀರ್ಘ ಚರ್ಚೆ ನಡೆಯಿತು. ಇದೇ ಸಂದರ್ಭದಲ್ಲಿ ಪಶು ಸಂಗೋಪನಾ ಇಲಾಖೆಯ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಭಿತ್ತಚಿತ್ರಗಳನ್ನು ಬಿಡುಗಡೆಗೊಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಸೇರಿದಂತೆ ತಾಲೂಕುಗಳ ತಹಸೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ