ಮಂಗಳವಾರ, ಅಕ್ಟೋಬರ್ 10, 2023
“ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ” ಅಭಿಯಾನ
ಬಳ್ಳಾರಿ,ಅ.10(ಕರ್ನಾಟಕ ವಾರ್ತೆ):
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು “ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ” ಎಂಬ ಅಭಿಯಾನ ಸೋಮವಾರದಂದು ತಾಲೂಕಿನ ಸಂಗನಕಲ್ಲು ಮತ್ತು ಕಪ್ಪಗಲ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಾಲನೆಗೊಂಡಿತು.
ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ನರೇಗಾ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು “ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ” ಅಭಿಯಾನವನ್ನು ಅ.31ರವರೆಗೆ ಆಟೋ ಪ್ರಚಾರ ಮೂಲಕ ಎಲ್ಲಾ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗ್ರಾಮದ ರೈತರಿಗೆ ವೈಯಕ್ತಿಕ ಕಾಮಗಾರಿ ಬೇಡಿಕೆಯನ್ನು ಹಾಗೂ ಗ್ರಾಮ ಪಂಚಾಯತಿಯಲ್ಲಿನ ಕಾಮಗಾರಿಗಳ ಬೇಡಿಕೆಗಳನ್ನು ಪೆಟ್ಟಿಗೆಯಲ್ಲಿ ಸಂಗ್ರಹಿಸಲಾಗುವುದು. ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮನೆ ಮನೆಗೆ ಭೇಟಿ ಮಾಡಿ ಮಾಹಿತಿಯನ್ನು ಸಂಗ್ರಹಿಸಲು ತಂಡ ರಚನೆ ಮಾಡಲಾಗಿದೆ. ತಂಡವು ಪ್ರತಿ ದಿನ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಅಭಿಯಾನ ಕುರಿತು ಮಾಹಿತಿ ನೀಡುತ್ತಾರೆ ಎಂದರು.
ನರೇಗಾ ಯೋಜನೆಯಡಿ ದೊರೆಯುವ ಕೂಲಿಯ ಮೊತ್ತ, ಗಂಡು ಹೆಣ್ಣಿಗೆ ಸಮಾನ ಕೂಲಿ, ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸದ ಪ್ರಮಾಣ ಮತ್ತು ಕೆಲಸದ ಅವಧಿ, ಯೋಜನೆಯಡಿ ದೊರೆಯುವ ವೈಯಕ್ತಿಕ ಸೌಲಭ್ಯಗಳು, ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನರಿಗೆ ಶೇ.50 ರಷ್ಟು ರಿಯಾಯಿತಿ, ಕಾಮಗಾರಿ ಸ್ಥಳದಲ್ಲಿ ಒದಗಿಸಲಾಗುವ ಸೌಲಭ್ಯಗಳು, ಅಕುಶಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರಿಗೆ ನಿರ್ವಹಿಸುವ ಕೆಲಸಕ್ಕೆ/ಕೂಲಿ ಕಾರ್ಮಿಕರುಗಳಿಗೆ ಹೆಚ್ಚುವರಿಯಾಗಿ ಶೇ.20ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡುವ ಕುರಿತು ಹಾಗೂ ಮಹಿಳಾ ಭಾಗವಹಿಸುವಿಕೆಯನ್ನು ಕನಿಷ್ಟ ಶೇ.60 ಪ್ರತಿಶತಕ್ಕೆ ಹೆಚ್ಚಿಸುವುದರ ಕುರಿತು ಮಾಹಿತಿ ಒದಗಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಬಸವರಾಜ.ಆರ್.ಕೆ, ಗ್ರಾಮ ಪಂಚಾಯತಿಗಳ ಪಿಡಿಓ, ಗ್ರಾಪಂಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ತಾಲೂಕು ನರೇಗಾ ಸಿಬ್ಬಂದಿಗಳು, ಸ್ವಸಹಾಯ ಸಂಘದ ಸದಸ್ಯರು, ಎಮ್‍ಬಿಕೆಗಳು, ತಾಂತ್ರಿಕ ಸಹಾಯಕರು, ಬಿಎಫ್‍ಟಿಗಳು ಮತ್ತು ಗ್ರಾಮ ಕಾಯಕ ಮಿತ್ರರು ಹಾಜರಿದ್ದರು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)





ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ