ಸೋಮವಾರ, ಅಕ್ಟೋಬರ್ 2, 2023

ಸಾರ್ವಜನಿಕ ಸ್ಥಳಗಳ ಮೇಲೆ ಭಾವನಾತ್ಮಕ ಮನಸ್ಥಿತಿ ಇರಲಿ: ಕುಲಸಚಿವ ರುದ್ರೇಶ್

ಬಳ್ಳಾರಿ,ಅ.02(ಕರ್ನಾಟಕ ವಾರ್ತೆ): ಸಾರ್ವಜನಿಕ ಸ್ಥಳಗಳಿಗೆ ಭಾವನಾತ್ಮಕ ಮನಸ್ಥಿತಿಯಿಂದ ನಮ್ಮನ್ನು ಅರ್ಪಿಸಿಕೊಳ್ಳುವುದರಿಂದ ದೇಶ ಪ್ರೇಮಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ರುದ್ರೇಶ್ ಎಸ್.ಎನ್ ಹೇಳಿದರು. ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಕೋಶದಿಂದ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿರವರ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಮನೆ ಮತ್ತು ಧರ್ಮಕ್ಕೆ ನೀಡಿರುವ ಭಾವನಾತ್ಮಕ ಸಂಬಂಧವನ್ನು ಸಾರ್ವಜನಿಕ ಸ್ಥಳಗಳಿಗೆ, ಸರ್ಕಾರಿ ಕಚೇರಿಗಳಿಗೆ, ಸಂಘ-ಸಂಸ್ಥೆಗಳಿಗೆ ನೀಡಿದರೆ ನಿಜವಾದ ಭವ್ಯವಾದ ರಾಷ್ಟ್ರ ನಿರ್ಮಿಸಲು ಸಾಧ್ಯ ಎಂದರು. ಇಂದಿನ ಪೀಳೆಗೆಯು ಗಾಂಧಿಜೀಯವರ ತತ್ವಾದರ್ಶಗಳನ್ನು ಪುನರಾವರ್ತನೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದ ಅವರು, ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲಾ ಸಿಬ್ಬಂಧಿ ವರ್ಗಗಳಿಗೆ ಮಹಾತ್ಮರ ಜಯಂತಿಯ ಶುಭಾಷಯ ಕೋರಿದರು. ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ವಿಶ್ವವಿದ್ಯಾಲಯದ ಆವರಣದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಸಗೂಡಿಸದಲ್ಲದೆ ಅದನ್ನು ಬುಟ್ಟಿಯಲ್ಲಿ ತುಂಬಿ ಪಾಲಿಕೆ ಸ್ವಚ್ಛತಾ ವಾಹನಕ್ಕೆ ಹಾಕಲಾಯಿತು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಪ್ರೊ.ಸದ್ಯೋಜಾಥಪ್ಪ, ರಾಷ್ಟ್ರೀಯ ಸೇವಾ ಯೋಜನೆ ಕೋಶ ಸಂಯೋಜನಾಧಿಕಾರಿ ಡಾ.ಕುಮಾರ್, ವಿದ್ಯಾರ್ಥಿ ಕಲ್ಯಾಣ ಘಟಕದ ನಿರ್ದೇಶಕ ಪ್ರೊ.ಜಿ.ಪಿ.ದಿನೇಶ್ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ