ಶುಕ್ರವಾರ, ಅಕ್ಟೋಬರ್ 13, 2023

ಕರ್ನಾಟಕ ರಾಜ್ಯೊತ್ಸವ ಅದ್ದೂರಿ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲು ಸೂಚನೆ: ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ

ಬಳ್ಳಾರಿ,ಅ.13(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಎಂದು ಹೆಸರನ್ನು ಮರುನಾಮಕರಣ ಮಾಡಿ, ನವೆಂಬರ್ 1 ಕ್ಕೆ 50 ವರ್ಷಗಳು ತುಂಬಲಿವೆ, ಈ ಹಿನ್ನಲೆಯಲ್ಲಿ ಈ ವರ್ಷ ಅದ್ದೂರಿಯಾಗಿ ರಾಜ್ಯೋತ್ಸವ ಆಚರಣೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಕರ್ನಾಟಕ ರಾಜ್ಯ ಉದಯಿಸಿ 50 ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ, ಈ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಜಿಲ್ಲಾಡಳಿತದಿಂದ ಸಾಂಪ್ರದಾಯಿಕ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲು ಎಲ್ಲಾ ಇಲಾಖೆಗಳು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಹೇಳಿದರು. ನವೆಂಬರ್ 1ರಂದು ಬೆಳಿಗ್ಗೆ 11ಕ್ಕೆ ನಗರದ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜರೋಹಣ ನಡೆಯಲಿದೆ. ಇದಕ್ಕೂ ಮೊದಲು ಬೆಳಿಗ್ಗೆ 09ಕ್ಕೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಿಂದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾತಂಡಗಳೊಂದಿಗೆ ನಾಡತಾಯಿ ಭುವನೇಶ್ವರಿಯ ಭವ್ಯ ಮೆರವಣಿಗೆ ನಡೆಯಲಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಕನ್ನಡಪರ ಎಲ್ಲಾ ಸಂಘಟನೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವಂತೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ನಾಡು, ನುಡಿ ಹಾಗೂ ಸಂಸ್ಕøತಿಯನ್ನು ಪ್ರತಿಬಿಂಬಿಸುವ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು ಎಂದು ನಿರ್ದೇಶನ ನೀಡಿದರು. *ಸ್ತಬ್ಧಚಿತ್ರ, ಕಲಾ ತಂಡಗಳಿಂದ ಭವ್ಯ ಮೆರವಣಿಗೆ:* ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಮಾತನಾಡಿ, ಕರ್ನಾಟಕ ರಾಜ್ಯವು 50 ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ರಾಜ್ಯೋತ್ಸವದ ಮೆರವಣಿಗೆಯನ್ನು ಈ ವರ್ಷ ಅತ್ಯಂತ ಅದ್ದೂರಿಯಾಗಿ ಮಾಡೋಣ ಎಂದು ಹೇಳಿದರು. ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳು ಸೃಜನಾತ್ಮಕ ಮತ್ತು ನವ ಸ್ತಬ್ಧಚಿತ್ರಗಳನ್ನು ತಯಾರಿಸಬೇಕು, ಸಾರ್ವಜನಿಕರನ್ನು ಹಾಗೂ ನೋಡುಗರನ್ನು ಆಕರ್ಷಿಸುವಂತೆ ರೂಪಿಸಬೇಕು ಎಂದು ಸೂಚಿಸಿದರು. *ನಗರದ ಕೋಟೆ, ಮುಖ್ಯ ವೃತ್ತಗಳಿಗೆ ದೀಪಾಲಂಕಾರ:* ರಾಜ್ಯೋತ್ಸವ ಅಂಗವಾಗಿ ನಗರದ ಏಕಶಿಲಾ ಬೆಟ್ಟದ ಕೋಟೆಗೆ ದೀಪಾಲಂಕಾರ ವ್ಯವಸ್ಥೆ ಮಾಡಬೇಕು. ಅದರಂತೆ, ನಗರದ ಮುಖ್ಯ ವೃತ್ತಗಳಿಗೆ ದೀಪಾಲಂಕಾರ ವ್ಯವಸ್ಥೆ ಮಾಡಬೇಕು ಎಂದು ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಅವರು ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಅಧಿಕಾರಿಗಳು ಕೂಡ ತಮ್ಮ ಇಲಾಖೆಯ ಕಚೇರಿಗಳಿಗೆ ದೀಪಾಲಂಕಾರ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು. ಸಭೆಯಲ್ಲಿ ಭಾಗವಹಿಸಿದ ವಿವಿಧ ಕನ್ನಡಪರ ಸಂಘಟನೆಗಳು ರಾಜ್ಯೋತ್ಸವವನ್ನು ಅಚ್ಚುಕಟ್ಟಾಗಿ ಮತ್ತು ಅದ್ದೂರಿಯಾಗಿ ಆಚರಣೆ ಮಾಡಲು ತಮ್ಮ ಸಲಹೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನೂರಪ್ಪ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ