ಸೋಮವಾರ, ನವೆಂಬರ್ 27, 2023

ವಿಕಲಚೇತನರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿ ಹೊಂದಬೇಕು: ನ್ಯಾ.ರಾಜೇಶ್ ಹೊಸಮನಿ

ಬಳ್ಳಾರಿ,ನ.27(ಕರ್ನಾಟಕ ವಾರ್ತೆ): ವಿಶೇಷ ಚೇತನರು ಸಂವಿಧಾನಾತ್ಮಕವಾಗಿ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ವಿಮ್ಸ್ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿಕಲಚೇತನರಾಗಿದ್ದರೂ ಬಹಳಷ್ಟು ಮಂದಿ ಐಎಎಸ್ ಪರೀಕ್ಷೆಯನ್ನೂ ಪಾಸ್ ಮಾಡಿದ್ದಾರೆ. ಪ್ಯಾರಾ ಒಲಂಪಿಕ್ ಕ್ರೀಡಾಕೂಟದಲ್ಲೂ ಉತ್ತಮ ಸಾಧನೆ ತೋರಿದ್ದಾರೆ. ಹಾಗಾಗಿ ಸಾಧನೆ ಮಾಡಬೇಕು ಎಂದು ಛಲ ಹೊಂದಿದ್ದರೆ ಅಂಗವೈಕಲ್ಯತೆ ಸಾಧನೆಗೆ ಅಡ್ಡಿಯಾಗಲಾರದು ಎಂದು ಹೇಳಿದರು. ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಕಲಚೇತರು ತುಂಬಾ ಉತ್ಸುಕರಾಗಿ ಭಾಗವಹಿಸುತ್ತಿರುವುದನ್ನು ಕಂಡರೆ ಸಂತೋಷವಾಗುತ್ತಿದೆ ಎಂದು ಹರ್ಷ ವ್ಯಕ್ತ ಪಡಿಸಿದರು. ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ವಿಕಲಚೇತನರಿಗೆ ಶ್ರವಣ ದೋಷವುಳ್ಳವರಿಗೆ 100ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ ಸ್ಪರ್ಧೆ, ದೈಹಿಕ ವಿಕಲಚೇತನರಿಗೆ 100 ಮೀ ಓಟ, ಗುಂಡು ಎಸೆತ, ಬುದ್ಧಿಮಾಂದ್ಯರಿಗೆ 100 ಮೀ. ಓಟ, ಮ್ಯೂಜಿಕಲ್ ಚೇರ್ ಸ್ಪರ್ಧೆ ಆಯೋಜಿಸಲಾಗಿತ್ತು. ದೃಷ್ಟಿದೋಷ ಮತ್ತು ದೈಹಿಕ ವಿಕಲಚೇತನರು ಮತ್ತು ಬುದ್ದಿಮಾಂದ್ಯವಿರುವವರಿಗೆ ಜಾನಪದ ಗೀತೆ, ಭಾವಗೀತೆ, ಭಕ್ತಿಗೀತೆ ಸ್ಪರ್ಧೆಗಳು ನಡೆದವು. ನಗರದ ವಿಮ್ಸ್ ಕ್ರೀಡಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ನೋಡುಗರಿಗೆ ಗಮನಸೆಳೆದವು. ಈ ಸಂದರ್ಭದಲ್ಲಿ ವಿಮ್ಸ್ ಅಧೀಕ್ಷಕ ಸೋಮಶೇಖರ್, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಸೇರಿದಂತೆ ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು, ಮತ್ತಿತರು ಉಪಸ್ಥಿತರಿದ್ದರು. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ