ಶುಕ್ರವಾರ, ಡಿಸೆಂಬರ್ 29, 2023
‘ಮನುಜ ಮತ ವಿಶ್ವಪಥ’ ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ ಕುವೆಂಪು: ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ
ಬಳ್ಳಾರಿ,ಡಿ.29(ಕರ್ನಾಟಕ ವಾರ್ತೆ):
ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ, ಆದರ್ಶಗಳು ಸಾರ್ವಕಾಲಿಕ. ‘ಮನುಜ ಮತ ವಿಶ್ವಪಥ’ ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನ ಅಂಗವಾಗಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. ವಿಶ್ವಮಾನವ ಧರ್ಮವನ್ನು ರೂಪಿಸಿಕೊಟ್ಟ ರಾಷ್ಟ್ರಕವಿ ಕುವೆಂಪು ಅವರ ವಿಚಾರಗಳನ್ನು ಪ್ರತಿಯೊಬ್ಬರೂ ಅಳವಡಿಕೊಳ್ಳುವ ಅಗತ್ಯವಿದೆ. ಕುವೆಂಪು ಅವರ ವೈಚಾರಿಕತೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆ ಅನನ್ಯವಾದುದು ಎಂದರು.
ರಾಷ್ಟ್ರಕವಿ ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು. ಅವರ ಕಾವ್ಯಗಳಲ್ಲಿರುವ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಾಯವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ವಿಶೇಷ ಉಪನ್ಯಾಸದಲ್ಲಿ ಮೋಕಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಕಲಾವತಿ.ಬಿ.ಜಿ ಅವರು ಮಾತನಾಡಿ, ‘ಮಾನವ ತನ್ನ ಮನಸನ್ನು ವಿಶ್ವದಷ್ಟು ವಿಶಾಲವಾಗಿ ಇಟ್ಟುಕೊಳ್ಳಬೇಕು. ಹೃದಯವಂತಿಕೆ ಸಜ್ಜನಿಕೆ, ಅಭಿಮಾನ, ಪ್ರೀತಿ, ಸಹನೆ ಹಾಗೂ ಕರುಣೆ ಎಲ್ಲವೂ ಮುಖ್ಯ ಎನ್ನುವುದನ್ನು ತಮ್ಮ ಕಾವ್ಯಗಳ ಮೂಲಕ ಕುವೆಂಪು ಅವರು ಜಗತ್ತಿಗೆ ಪರಿಚಯಿಸಿದವರು’ ಎಂದು ಸ್ಮರಿಸಿದರು.
ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿಯನ್ನು ಅವರು ಪರಿಚಯಿಸಿದ್ದರು. ಈ ಪಂಚಮಂತ್ರಗಳು ಮುಂದಿನ ಪೀಳಿಗೆಗೆ ದೃಷ್ಟಿಕೋನವಾಗಬೇಕು ಎಂಬುದು ಅವರ ಆಶಯವಾಗಿತ್ತು ಎಂದು ಹೇಳಿದರು.
ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪು ಅವರದಾಗಿತ್ತು. ಹಾಗಾಗಿ ಕುವೆಂಪು ಅವರ ಜಾತ್ಯಾತೀತ ಮನೋಭಾವದಿಂದ ಮೂಡಿ ಬಂದ ಆಶಯವೇ ವಿಶ್ವಮಾನವ ಸಂದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಹೊನ್ನೂರಪ್ಪ.ಟಿ., ಕಲಾವಿದರಾದ ಯಲ್ಲನಗೌಡ, ಮಂಜುನಾಥ ಸೇರಿದಂತೆ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ