ಗುರುವಾರ, ಡಿಸೆಂಬರ್ 28, 2023
ಸ್ವಸ್ಥ್ಯ ಸಮಾಜ ನಿರ್ಮಿಸಲು ಯುವಕರು ಮುಂದಾಗಲಿ: ರುದ್ರೇಶ ಎಸ್.ಎನ್
ಬಳ್ಳಾರಿ,ಡಿ.28(ಕರ್ನಾಟಕ ವಾರ್ತೆ):
ದೇಶದ ಯುವಕರು ಸಮಾಜದ ಸ್ವಾಸ್ಥ್ಯ ಕಾಪಾಡಲು ಸ್ವಯಂ ಪ್ರೇರಿತರಾಗಿ ಮುಂದಾಗಬೇಕು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರಾದ ರುದ್ರೇಶ ಎಸ್.ಎನ್ ಅವರು ಹೇಳಿದರು.
ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಷ್ಟೀಯ ಸೇವಾ ಯೋಜನಾ ಕೋಶ ಇವರ ಸಂಯುಕ್ತಾಶ್ರಯದಲ್ಲಿ ನಗರದ ಹೊರವಲಯದಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ “ಹೆಚ್.ಐ.ವಿ/ಏಡ್ಸ್, ಟಿ.ಬಿ., ಆರ್‍ಆರ್‍ಸಿ ಗುರಿ ಉದ್ದೇಶ ಮತ್ತು ರಕ್ತದಾನ” ಕುರಿತಾದ ವಿಶ್ವವಿದ್ಯಾಲಯ ವ್ಯಾಪ್ತಿಗೊಳಪಡುವ ಎಲ್ಲಾ ಪದವಿ ಮಹಾವಿದ್ಯಾಲಯಗಳ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿಗಳಿಗೆ ಗುರುವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಸದೃಢ ಸಮಾಜ ನಿರ್ಮಿಸುವಲ್ಲಿ ಯುವಕರ ಪಾತ್ರ ಬಹುಮುಖ್ಯವಾಗಿದೆ. ಯುವಕರು ದುಶ್ಚಟಗಳಿಗೆ ಒಳಗಾಗದೆ ದೇಹ ಮತ್ತು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.
ಪ್ರಾಧ್ಯಾಪಕರು ಕಾರ್ಯಾಗಾರದಲ್ಲಿ ಪಡೆದಂತಹ ಮಾಹಿತಿಯನ್ನು ಸಮಾಜದ ಒಳಿತಿಗಾಗಿ ಬಳಸಬೇಕು ಎಂದು ಸಲಹೆ ನೀಡಿದರು.
ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಡಾ.ಅನಂತ ಎಲ್.ಝಂಡೆಕರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಆರೋಗ್ಯ ಇಲಾಖೆಯು ಹೆಚ್‍ಐವಿ ಏಡ್ಸ್ ನಿಯಂತ್ರಣ ಜಾಗೃತಿ ಮೂಡಿಸಲು ಶ್ರಮಿಸುತ್ತಿದೆ. ಏಡ್ಸ್ ಕುರಿತಾಗಿ ಜನರಲ್ಲಿರುವ ತಪ್ಪು ಮಾಹಿತಿಯನ್ನು ಹೋಗಲಾಡಿಸಲು ವಿವಿಧ ಕಾರ್ಯಕ್ರಮಗಳ ಮೂಲಕ ಪ್ರಯತ್ನಿಸುತ್ತಿದ್ದು, ಇಂತಹ ಮಾರಕ ರೋಗಗಳ ಕುರಿತು ಅಧ್ಯಾಪಕರುಗಳು ಯುವಕರಿಗೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕ ಗಿರೀಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಮಾಜಿ ಪ್ರಭಾರ ಕುಲಪತಿಗಳಾದ ಪ್ರೊ. ಸಾಹೇಬ್ ಅಲಿ ಹೆಚ್.ನಿರಗುಡಿ, ರಾಷ್ಟ್ರೀಯ ಸೇವಾಯೋಜನೆ ಸಂಯೋಜನಾಧಿಕಾರಿ ಡಾ.ಕುಮಾರ ಸೇರಿದಂತೆ ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು ಹಾಗೂ ವವಿಶ್ವವಿದ್ಯಾಲಯ ವ್ಯಾಪ್ತಿಗೊಳಪಡುವ ಎಲ್ಲಾ ಪದವಿ ಮಹಾವಿದ್ಯಾಲಯಗಳ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ