ಗುರುವಾರ, ಡಿಸೆಂಬರ್ 21, 2023

ಮಕ್ಕಳ ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸಿ: ಶಶಿಧರ ಕೋಸಂಬೆ

ಬಳ್ಳಾರಿ,ಡಿ.21(ಕರ್ನಾಟಕ ವಾರ್ತೆ): ಮಕ್ಕಳ ಸವಾರ್ಂಗೀಣ ಅಭಿವೃದ್ಧಿಗೆ ಸಮಾಜ ಹಾಗೂ ಶಾಲೆ, ವಸತಿ ನಿಲಯಗಳಲ್ಲಿ ಪೂರಕ ವಾತಾವರಣ ಕಲ್ಪಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೊಸಂಬೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗ, ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಭಾಗೀದಾರರೊಂದಿಗೆ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ, ಮಕ್ಕಳ ಪಾಲನಾ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರುಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ಅವರು ಮಾತನಾಡಿದರು. ವಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಾಣಂತಿಯರಿಗೆ ಸರಿಯಾದ ಶೌಚಾಲಯ ಸೇರಿದಂತೆ ಬಿಸಿ ನೀರಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲ. ಚಳಿಗಾಲ ಸಂದರ್ಭದಲ್ಲಿ ಬಾಣಂತಿಯರ ಕ್ಷೇಮ ಅತಿ ಮುಖ್ಯವಾದುದು. ಈ ಕೂಡಲೇ ತುರ್ತಾಗಿ ಕ್ರಮ ವಹಿಸಬೇಕು ಎಂದು ವಿಮ್ಸ್ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳ ಪೌಷ್ಟಿಕ ಪುನರ್ಚೇತನ ಘಟಕದಲ್ಲಿ ಮೂವರು ಮಕ್ಕಳನ್ನು ಒಂದೇ ಬೆಡ್‍ನಲ್ಲಿ ಆರೈಕೆ ಮಾಡುವುದು ಕಂಡುಬಂದಿದ್ದು ನೋಡಿ ಬೇಸರ ವ್ಯಕ್ತಪಡಿಸಿದರು. ತಾಯಿ ಮಕ್ಕಳ ಆಸ್ಪತ್ರೆಯ ಕಟ್ಟಡ ಪೂರ್ಣಗೊಂಡಿದ್ದು, ಯಾಕೆ ಇನ್ನೂ ಆರಂಭವಾಗಿಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಮಾತನಾಡಿ, ಇನ್ನೂ ಒಂದು ವಾರದೊಳಗೆ 100 ಹಾಸಿಗೆಗಳುಳ್ಳ ತಾಯಿ ಮಕ್ಕಳ ಆಸ್ಪತ್ರೆಯ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಈ ಭಾಗದ ಶಾಸಕರಿಂದ ಲೋಕಾರ್ಪಣೆಗೊಳಿಸಿ, ಸ್ಥಳಾಂತರಕ್ಕೆ ಕ್ರಮ ವಹಿಸಲಾಗುವುದು ಎಂದು ಆಯೋಗದ ಸದಸ್ಯರ ಗಮನಕ್ಕೆ ತಂದರು. ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 107 ಬಾಲ್ಯ ವಿವಾಹ ಪ್ರಕರಣಗಳು ನಡೆದಿದ್ದು, ಇದರಲ್ಲಿ 103 ಬಾಲ್ಯ ವಿವಾಹ ಪ್ರಕರಣಗಳನ್ನು ತಡೆ ಹಿಡಿಯಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯ್ಕ ಅವರು ಆಯೋಗದ ಸದಸ್ಯರಿಗೆ ತಿಳಿಸಿದರು. ಇದಕ್ಕೆ ದನಿಗೂಡಿಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು, ಸಮುದಾಯ ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಸಭೆ ನಡೆಸಿ, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮ ಕುರಿತು, ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ನಿರ್ದೇಶನ ನೀಡಿದರು. ಕಂಪ್ಲಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ವಸತಿ ಶಾಲೆಯು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಕ್ಕಳಿಗೆ ಬಿಸಿ ನೀರಿನ ವ್ಯವಸ್ಥೆ ಇಲ್ಲ, ಶಾಲೆಯ ಆವರಣದಲ್ಲಿ ಹಂದಿ ಹಾವಳಿ ಇದೆ. ಮಕ್ಕಳು 50 ಕ್ಕೂ ಹೆಚ್ಚು ಮಕ್ಕಳು ಗೈರು ಹಾಜರಾಗಿದ್ದಾರೆ. ಶಿಕ್ಷಕರು ಗೈರಾಗಿದ್ದರು. ಆಹಾರ ಪದ್ಧತಿಯಲ್ಲಿ ನ್ಯೂನತೆ ಕಂಡು ಬಂದಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಕೂಡಲೇ ಸೂಕ್ತ ಕಟ್ಟಡಕ್ಕಾಗಿ ಕೇಂದ್ರ ಕಚೇರಿಗೆ ಪತ್ರ ಬರೆಯಬೇಕು. ತ್ವರಿತವಾಗಿ ಬಿಸಿ ನೀರಿನ ವ್ಯವಸ್ಥೆ ಮಾಡಿಕೊಡಬೇಕು. ಯಾದಗಿರಿ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಘಟನೆ ಮರುಕಳಿಸಬಾರದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು. ಅನುಪಾಲನಾ ವರದಿ ನೀಡಿ: ಪ್ರತಿ ಬಾರಿಯೂ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೈಗೊಳ್ಳುವ ಕ್ರಮ ಕುರಿತು ಸೂಚನೆ ನೀಡಿದರೂ ಮತ್ತು ಆ ಸಮಸ್ಯೆಗಳ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ಏಕೆ ಅನುಪಾಲನಾ ವರದಿ ನೀಡುವುದಿಲ್ಲ? ಎಂದು ಪ್ರಶ್ನಿಸಿದ ಅವರು, ಬೇರೆ ಜಿಲ್ಲೆಯವರು ಅನುಪಾಲನಾ ವರದಿ ನೀಡುತ್ತಾರೆ; ನೀವು ಯಾಕೆ ನೀಡುವುದಿಲ್ಲ, ಏನು ಸಮಸ್ಯೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶಾಲೆ ಬಿಟ್ಟ ಮಕ್ಕಳನ್ನು ಕರೆ ತರುವ ಪ್ರಯತ್ನ ಮಾಡಿ: ಜಿಲ್ಲೆಯಲ್ಲಿ 6 ಸಾವಿರಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ವಂಚಿತರಾಗಿದ್ದಾರೆ ಎಂಬುದು ಶಿಕ್ಷಣ ಇಲಾಖೆಯಿಂದ ಅಂಕಿ ಅಂಶ ಲಭ್ಯವಿದೆ. ಬಿಆರ್‍ಓಗಳು ಮನೆ ಮನೆಗೆ ಭೇಟಿ ನೀಡಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಪ್ರಯತ್ನ ಮಾಡಬೇಕು. ಈ ಕುರಿತು ಡಿಡಿಪಿಐ ಅವರು ಕ್ರಮ ವಹಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಸೂಚಿಸಿದರು. ಪ್ರಗತಿ ಆಪ್ ನಲ್ಲಿ ಮಾಹಿತಿ ನಮೂದಿಸಿ: ಜಿಲ್ಲೆಯಲ್ಲಿ ವಿವಿಧ ವಸತಿ ಶಾಲೆಗಳಿಗೆ ಭೇಟಿ ನೀಡಲು ವೇಳಾಪಟ್ಟಿ ಮತ್ತು ಅಲ್ಲಿನ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದ ವಿವರ ನಮೂದಿಸಲು, ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿಶೇಷವಾಗಿ ಜಿಪಂ ವತಿಯಿಂದ ರಚಿಸಿದ ಪ್ರಗತಿ ಆಪ್ ನಲ್ಲಿ ಆಯಾ ಇಲಾಖೆಯ ಅಧಿಕಾರಿಗಳಿಗೆ ವೇಳಾಪಟ್ಟಿಯನ್ನು ರವಾನಿಸಲಾಗುತ್ತದೆ. ಪರಿಶೀಲನೆ ನಡೆಸಿದ ಎಲ್ಲಾ ವಿವರಗಳನ್ನು ಅದರಲ್ಲಿ ನಮೂದಿಸಬೇಕು ಎಂದು ಜಿಪಂ ಯೋಜನಾ ನಿರ್ದೇಶಕ ಪ್ರಮೋದ್ ಅವರು ಸಭೆಗೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಮೋದ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯ ಕುಮಾರ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ