ಬುಧವಾರ, ಜನವರಿ 24, 2024

ಜ.30ರಿಂದ ಫೆ.13ರ ವರೆಗೆ ನಡೆಯುವ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಯಶಸ್ವಿಗೊಳಿಸಿ: ಎಡಿಸಿ ಮೊಹಮ್ಮದ್ ಝುಬೇರ್

ಬಳ್ಳಾರಿ,ಜ.24(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜ.30 ರಿಂದ ಫೆ.13 ರ ವರೆಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕೆ ಬೇಕಾದ ಅಗತ್ಯ ಸಿದ್ಧತೆ ಮತ್ತು ಪ್ರಚಾರ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು. ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಕುರಿತು ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳ ಕಾರ್ಯಾಲಯ ವತಿಯಿಂದ ಸ್ವರ್ಶ್ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಜಿಲ್ಲಾ ಮಟ್ಟದಲ್ಲಿ ಜ.30ರಂದು ಆಯೋಜಿಸಲಾಗುವುದು. ಈ ಜಾಗೃತಿ ಅಭಿಯಾನವನ್ನು ಅದೇ ದಿನದಂದು ತಾಲೂಕು ಮಟ್ಟದಲ್ಲಿ ಆಯಾ ತಾಲೂಕು ಮಟ್ಟದ ಅಧಿಕಾರಿಗಳಿಂದ ಆಯೋಜಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಶಾಲೆಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ ಇಒಗಳಿಂದ ನಡೆಸಬೇಕು ಎಂದು ಹೇಳಿದರು. ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ವ್ಯಾಪಕ ಮಾಹಿತಿ ನೀಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸಂರಕ್ಷಣಾ ಅಧಿಕಾರಿಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ತಿಳಿಸಬೇಕು ಎಂದರು. ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೀರೇಂದ್ರಕುಮಾರ್ ಅವರು ಮಾತನಾಡಿ, ಕುಷ್ಠರೋಗವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಇದಕ್ಕೆ ಭಯಪಡುವ ಅಗತ್ಯವಿಲ್ಲ, ಈ ಜಾಗೃತಿ ಅಭಿಯಾನದ ಸಂದರ್ಭದಲ್ಲಿ ಶಾಲಾ ಮಕ್ಕಳ ತಪಾಸಣೆ, ಉಪ ಆರೋಗ್ಯ ಕೇಂದ್ರ ಮೂಲಕ ಗ್ರಾಮದಲ್ಲಿ ಜಾಗೃತಿ ಮೂಡಿಸುವುದೂ ಸೇರಿದಂತೆ ಕುಷ್ಠರೋಗ ನಿರ್ಮೂಲನೆಯ ಕುರಿತು ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಲಾಗುವುದು ಎಂದರು. ಪಾದಗಳ ಮತ್ತು ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ವ್ಯಕ್ತಿಯ ದೇಹದ ಮೇಲೆ ಸ್ಪರ್ಶ ಜ್ಞಾನವಿಲ್ಲ ಮಚ್ಚೆಗಳು, ತ್ವಚ್ಚೆಯ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು, ವ್ಯಕ್ತಿಯ ದೇಹದ ಯಾವುದೇ ಭಾಗಗಳಲ್ಲಿ ತಿಳಿ ಬಿಳಿ ತಾಮ್ರದ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡು ಬಂದಲ್ಲಿ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕುರಿತು ಪ್ರತಿಜ್ಞೆಯನ್ನು ಸ್ವೀಕರಿಸಿದರು. ನಂತರ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಭಿತ್ತಿಚಿತ್ರಗಳನ್ನು ಗಣ್ಯರು ಬಿಡುಗಡೆಗೊಳಿಸಿದರು. ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣ ಅನುಷ್ಠಾನ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ