ಗುರುವಾರ, ಫೆಬ್ರವರಿ 15, 2024
ಸಂವಿಧಾನ ಜಾಗೃತಿ ಜಾಥಾ: ಕಂಪ್ಲಿ ತಾಲ್ಲೂಕಿನಲ್ಲಿ ವಿವಿಧೆಡೆ ಸಂಚಾರ
ಬಳ್ಳಾರಿ,ಫೆ.15(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುತ್ತಿದ್ದು, ಬುಧವಾರದಂದು ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು, ನೆಲ್ಲುಡಿ ಹಾಗೂ ಸಣಾಪುರ ಗ್ರಾಮ ಹಾಗೂ ಕಂಪ್ಲಿ ಪಟ್ಟಣದಲ್ಲಿ ಸಂಚರಿಸಿತು.
ಸಂಚಾರದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಸಂವಿಧಾನ ರಚನಾ ಸಭೆ ಹಾಗೂ ಸಂವಿಧಾನದ ಕುರಿತ ವೀಡಿಯೋ ತುಣುಕುಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಯಿತು. ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಜಾಥಾದ ಉದ್ದಕ್ಕೂ ಸಂವಿಧಾನ ಪ್ರಸ್ತಾವನೆಯ ಪ್ರತಿಗಳನ್ನು ಹಂಚಿಕೆ ಮಾಡಲಾಯಿತು.
ಪ್ರಥಮವಾಗಿ ಎಮ್ಮಿಗನೂರು ಗ್ರಾಮದಲ್ಲಿ ಬಹಳ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕಂಪ್ಲಿ ತಾಲ್ಲೂಕಿನ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಭಾಗವಹಿಸಿದ್ದರು. ಎಮ್ಮಿಗನೂರು ಗ್ರಾಮದಲ್ಲಿ ವಿದ್ಯಾರ್ಥಿಗಳು 50 ಮೀಟರ್ ಉದ್ದದ ರಾಷ್ಟ್ರ ಧ್ವಜವನ್ನು ಹಿಡಿದು ಪ್ರಸ್ತಾವನೆಯ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕಂಪ್ಲಿ ಪಟ್ಟಣದಲ್ಲಿ ಜಾಥವನ್ನು ಅತ್ಯಂತ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಮೆರವಣಿಗೆಯಲ್ಲಿ ಕಳಶ ಹಾಗೂ ಪೂರ್ಣ ಕುಂಭ ಹೊತ್ತ ಮಹಿಳೆಯರು, ಲಂಬಾಣಿ ನೃತ್ಯ, ಕಹಳೆ ವಾದನ, ತಾಷಾ ರಾಂಡೋಲ್ ವಾದನ, ಹಗಲು ವೇಷಗಾರರಿಂದ ರಾಮಾಯಣ ಮಹಾಕಾವ್ಯದ ಹಗಲು ವೇಷದ ಕಲಾ ಪ್ರದರ್ಶನ, ಹಲಗೆ ವಾದನ, ಹಕ್ಕಿ ಪಿಕ್ಕಿ ಜನಾಂಗದ ನೃತ್ಯ, ಡ್ರಮ್ಸ್ ವಾದನಗಳಿಂದಾಗಿ ಜಾಥಾವು ಅದ್ದೂರಿಯಾಗಿ ಸಾಗಿತು.
ನಂತರ ಕಂಪ್ಲಿ ತಹಶೀಲ್ದಾರ್ ಎಸ್.ಶಿವರಾಜ್ ಅವರು ಮಾತನಾಡಿ, ರಾಜ್ಯ ಸರ್ಕಾರವು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ. ನಮ್ಮ ಸಂವಿಧಾನವು ಪ್ರಪಂಚದಲ್ಲಿಯೇ ದೊಡ್ಡ ಲಿಖಿತ ಸಂವಿಧಾನವಾಗಿದ್ದು, ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಆಡಳಿತ ವ್ಯವಸ್ಥೆ ಸುಸೂತ್ರವಾಗಿ ನಡೆಯಲು ಕಾರಣವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಆರ್.ಕೆ.ಶ್ರೀಕುಮಾರ್, ಕಂಪ್ಲಿ ಪುರಸಭೆ ಮುಖ್ಯ ಅಧಿಕಾರಿ ದುರ್ಗಣ್ಣ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಕಂಪ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಕಂಪ್ಲಿ ತಾಲೂಕಿನ ವಿವಿಧ ಶಾಲೆ ಮುಖ್ಯ ಗುರುಗಳು ಹಾಗೂ ಕಂಪ್ಲಿ ತಾಲೂಕಿನ ವಿವಿಧ ಶಾಲೆ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)











ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ