ಮಂಗಳವಾರ, ಏಪ್ರಿಲ್ 2, 2024

ಆರೋಗ್ಯ ಇಲಾಖೆಯಿಂದ ಮತದಾನ ಜಾಗೃತಿ 18 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೇ ಮತದಾನ ಮಾಡಿ: ಡಿಹೆಚ್‍ಓ ಡಾ.ವೈ.ರಮೇಶ್ ಬಾಬು

ಬಳ್ಳಾರಿ,ಏ.02(ಕರ್ನಾಟಕ ವಾರ್ತೆ): ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಗಳಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ತಪ್ಪದೇ ತಮ್ಮ ಮತ ಹಕ್ಕನ್ನು ಚಲಾಯಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಹೇಳಿದರು. ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಿಲ್ಲರ್ ಪೇಟೆ ನಗರ ಆರೋಗ್ಯ ಕೇಂದ್ರ, ಮರ್ರಿಸ್ವಾಮಿ ಮಠ ಆರೋಗ್ಯ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಮಿಲ್ಲರ್‍ಪೇಟೆ ಆರೋಗ್ಯ ಕೇಂದ್ರದಿಂದ ಮಂಗಳವಾರ ಏರ್ಪಡಿಸಿದ್ದ ಮತದಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. ಬರುವ ಮೇ 07 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತದಾನ ದಿನದಂದು ಪ್ರತಿಯೊಬ್ಬರೂ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು. ಪ್ರಜಾಪ್ರಭುತ್ವದಲ್ಲಿ ಮತದಾರ ಪ್ರಭುಗಳಾದ ನಾವು, ಚುನಾವಣೆ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು ಎಂದರು. ನಿಷ್ಪಕ್ಷಪಾತ ಚುನಾವಣೆ ನಡೆಸಲು ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಬಾರದು. ಸರಿಯಾದ ಅಭ್ಯರ್ಥಿಯನ್ನೇ ಆಯ್ಕೆ ಮಾಡಬೇಕು. ಅಂದಾಗ ಮಾತ್ರ ಸುಭದ್ರ ಪ್ರಜಾಪ್ರಭುತ್ವ ವ್ಯವಸ್ಥೆ ನಿರ್ಮಾಣಗೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್ ಅವರು ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಮತದಾನ ಜಾಗೃತಿ ಜಾಥಾವು ಮಿಲ್ಲರ್‍ಪೇಟೆ ನಗರ ಆರೋಗ್ಯ ಕೇಂದ್ರದಿಂದ ಆರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಮತದಾನ ಜಾಗೃತಿ ಘೋಷವಾಕ್ಯಗಳನ್ನೊಳಗೊಂಡ ಮಾಹಿತಿ ಫಲಕಗಳ ಮೂಲಕ ಅರಿವು ಮೂಡಿಸಿ ಬಿ.ಗೋನಾಳ್‍ವರೆಗೆ ತಲುಪಿತು. ಈ ವೇಳೆ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಮಿಲ್ಲರ್‍ಪೇಟೆ ನಗರ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸೌಜನ್ಯ, ವೈದ್ಯಾಧಿಕಾರಿ ಡಾ.ಗೀತಾ, ಸಿಬ್ಬಂದಿಗಳಾದ ಶಾಂತಮ್ಮ, ಮೇಘರಾಜ, ಆರೋಗ್ಯ ಮೇರಿ, ನೇತ್ರಾ, ಶರತ್, ಮಲ್ಲಿಕಾರ್ಜುನ, ಸೋಮಶೇಖರ, ರಾಜೇಶ್ವರಿ, ಮಾಬುನ್ನಿ, ನಾಗಲಕ್ಷ್ಮಿ, ಪ್ರತಿಭಾ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಮತ್ತಿತರರು ಭಾಗವಹಿಸಿದ್ದರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ