ಮಂಗಳವಾರ, ಜೂನ್ 11, 2024

ಜೂ.12 ರಂದು ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ'

ಬಳ್ಳಾರಿ,ಜೂ.11(ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಎಸ್‍ಜಿಆರ್‍ಸಿಎಂ ಕಾಲೇಜು ಮತ್ತು ಇತರೆ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಕಾರ್ಯಕ್ರಮವನ್ನು ಜೂ.12 ರಂದು ಬೆಳಿಗ್ಗೆ 10 ಗಂಟೆಗೆ ನಗರದ ರಂಗಮಂದಿರ ಹಿಂಭಾಗದ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದೆ. ಇದಕ್ಕೂ ಮುನ್ನ ಅಂದು ಬೆಳಿಗ್ಗೆ 08.30 ಗಂಟೆಗೆ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಿಂದ ಜಾಥಾ ನಡೆಯಲಿದ್ದು, ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಚಾಲನೆ ನೀಡುವರು. ಬಳಿಕ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಉದ್ಘಾಟಿಸುವರು. ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕಿ ಉಮಾದೇವಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹ್ಮದ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಲಾಲಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎರ್ರಿಗೌಡ, ಎಸ್‍ಜಿಆರ್‍ಸಿಎಂ ಕಾಲೇಜಿನ ಪ್ರಾಚಾರ್ಯರಾದ ಡಾ.ಸುಧಾಕರ್, ಸಂಪನ್ಮೂಲ ವ್ಯಕ್ತಿಯಾಗಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮೀ ಮೈದೂರ್ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು. *ಜಾಥ:* ನಗರದ ರಂಗಮಂದಿರ ಹಿಂಭಾಗದ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಿಂದ ಆರಂಭವಾಗಿ ಹೊಸ ಬಸ್ ನಿಲ್ದಾಣ, ಉಜ್ಜಿನಿ ಶಾಲೆ, ಎಪಿಎಂಸಿ ವೃತ್ತ, ಲಾರಿ ಟರ್ಮಿನಲ್ ಮೂಲಕ ಮರಳಿ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ