ಗುರುವಾರ, ಅಕ್ಟೋಬರ್ 10, 2024

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಮಾನಸಿಕ ಒತ್ತಡ ನಿಭಾಯಿಸಲು ಯೋಗ-ಧ್ಯಾನ ಸಹಕಾರಿ: ನ್ಯಾ.ರಾಜೇಶ್ ಹೊಸಮನೆ

ಬಳ್ಳಾರಿ,ಅ.10(ಕರ್ನಾಟಕ ವಾರ್ತೆ): ಕೆಲಸ ಮಾಡುವ ಸ್ಥಳದಲ್ಲಿ ಮಾನಸಿಕ ಆರೋಗ್ಯ ಕಾಪಾಡಲು ಯೋಗ, ಧ್ಯಾನ, ಪ್ರಾಣಾಯಾಮದಂತಹ ಮುಂತಾದ ಚಟುವಟಿಕೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಹೇಳಿದರು. ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಭವನದಲ್ಲಿ ಗುರುವಾರದಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಹಾಗೂ ವಿವಿಯ ಎನ್‌ಎಸ್‌ಎಸ್ ಘಟಕದ ಜಂಟಿ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸೇವಾನಿರತ ಸಿಬ್ಬಂದಿ ಜೊತೆಗೆ ಮಕ್ಕಳಲ್ಲಿ ಮಾನಸಿಕ ಒತ್ತಡ ಹೆಚ್ಚುತ್ತಿದೆ. ಇವುಗಳನ್ನು ತಡೆಗಟ್ಟಲು ಎಲ್ಲರೂ ಮುಕ್ತ ಚರ್ಚೆ ಮಾಡಬೇಕು ಎಂದರು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಜಿಲ್ಲಾ ಮನೋರೋಗ ತಜ್ಞರಾದ ಡಾ ರೋಹನ್ ವನಗುಂದಿ ಅವರು ಮಾತನಾಡಿ, ಮಾನವನು ದೈಹಿಕ ಆರೋಗ್ಯಕ್ಕೆ ನೀಡಿದಷ್ಟು ಪ್ರಾತಿನಿಧ್ಯತೆ ಮಾನಸಿಕ ಆರೋಗ್ಯಕ್ಕೆ ನೀಡುತ್ತಿಲ್ಲ. ಎಲ್ಲರ ಜೀವನವು ಸದಾ ಏರಿಳಿತಗಳಿಂದ ಕೂಡಿರುತ್ತದೆ. ಕೆಲಸದ ಸ್ಥಳ ಮತ್ತು ಕೌಟುಂಬಿಕ ಒಡನಾಟದಲ್ಲಿ ಸ್ಮಾರ್ಟ್ಫೋನ್‌ಗಳು ಸದ್ದಿಲ್ಲದೆ ಮನುಷ್ಯರ ಮೇಲೆ ಒತ್ತಡ ಹೆಚ್ಚಿಸುತ್ತಿವೆ. ವಾರಕ್ಕೊಂದು ದಿನ ಮೊಬೈಲ್ ಬಳಕೆ ನಿಲ್ಲಿಸಿದಲ್ಲಿ ಮಾನಸಿಕ ಆರೋಗ್ಯ ಸುಧಾರಣೆಯಾಗುತ್ತದೆ ಎಂದು ತಿಳಿಸಿದರು. ಭಾವನೆಗಳನ್ನು ನಿಯಂತ್ರಿಸುವುದರಿAದ ನಾವೆಲ್ಲ ಜೀವನದಲ್ಲಿ ಉದ್ದೇಶಿತ ಗುರಿ ಸಾಧನೆ ಮಾಡಬಹುದು ಎಂದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ವೀರೇಂದ್ರ ಕುಮಾರ್ ಮಾತನಾಡಿ, 25-30 ಪ್ರತಿಶತ ಜನ ದೇಶದಲ್ಲಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದಾರೆ. 15-25 ವಯೋಮಾನದವರಲ್ಲೇ ಈ ವ್ಯಾಧಿ ಹೆಚ್ಚು. ಇದರಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ತಡೆಗಟ್ಟಲು ಟೆಲಿ ಸಹಾಯವಾಣಿ 14416 ಪ್ರಾರಂಭಿಸಿದೆ. ಸಹಾಯವಾಣಿಯು 24 ಗಂಟೆ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಮಾತನಾಡಿ, ಮಾನಸಿಕ ಆರೋಗ್ಯ ಕಾಪಾಡುವಲ್ಲಿ ದೇಶದಲ್ಲಿಯೇ ಪ್ರಥಮ ಸ್ಥಾನ ಪಡೆದ ಜಿಲ್ಲೆಯಾಗಿ ಬಳ್ಳಾರಿ ಹೊರಹೊಮ್ಮಿದೆ. ಶೀಘ್ರದಲ್ಲೇ ಆತ್ಮಹತ್ಯೆ ಪಿಡುಗನ್ನು ತಡೆಯಲು ‘ಸುರಕ್ಷಾ’ ಎಂಬ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿಗಳಾದ ಪ್ರೊ. ಎಂ ಮುನಿರಾಜು ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಸರ್ಕಾರಗಳು ಸೇವಾನಿರತ ಸಿಬ್ಬಂದಿಯ ಆರೋಗ್ಯ ಕಾಪಾಡಲು ವಿಶೇಷ ಆಸಕ್ತಿ ವಹಿಸಿವೆ. ದಿನವೂ ದೈಹಿಕ ಕಸರತ್ತು ನಡೆಸುವುದರಿಂದ ಮಾನಸಿಕ ಆರೋಗ್ಯದಲ್ಲಿ ಹಿಡಿತ ಸಾಧಿಸಬಹುದು. ವಿವಿಯಲ್ಲಿ ಮನಶಾಸ್ತç ಅಧ್ಯಯನ ವಿಭಾಗವನ್ನು ಆರಂಭಿಸಿ ಮಕ್ಕಳಿಗೆ ಮಾನಸಿಕ ಆರೋಗ್ಯದ ಮತ್ತು ಅವುಗಳ ಕುರಿತ ಉದ್ಯೋಗವಕಾಶಗಳಿಗೆ ದಾರಿ ಮಾಡಿಕೊಡುವ ಉದ್ದೇಶವಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿವಿಯ ಕುಲಸಚಿವರಾದ ರುದ್ರೇಶ್.ಎಸ್.ಎನ್., ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಕುಮಾರ್ ಸೇರಿದಂತೆ ವಿಶ್ವವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ವಿವಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ