ಬುಧವಾರ, ಜೂನ್ 25, 2025

ರೈತರಿಗೆ ಬೆಳೆ ವಿವರ ದಾಖಲಿಸಲು ಅವಕಾಶ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಬಳ್ಳಾರಿ ತಾಲ್ಲೂಕಿನ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದಾರೆ. 2025-26 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭವಾಗಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಸಹ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತ: ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರ ದಾಖಲಿಸಬಹುದು. ಬೆಳೆ ವಿವರ ನಮೂದಿಸಲು ಮೊಬೈಲ್ ಆಪ್ ಬಳಸಬಹುದಾಗಿದ್ದು, ಗೂಗಲ್ ಪ್ಲೇ-ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2025-26” ಎಂಬ ಹೆಸರಿನ ಮೊಬೈಲ್ ಆಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಮೊಬೈಲ್ ಆಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ. *ವಿಧಾನ:* ಗೂಗಲ್ ಪ್ಲೇ-ಸ್ಟೋರ್‌ನಲ್ಲಿ “ಮುಂಗಾರು ರೈತರ ಬೆಳೆ ಸಮೀಕ್ಷೆ 2025-26” ಎಂದು ಹುಡುಕಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಬಳಿಕ ಆಧಾರ್ ವಿವರ ಮತ್ತು ಮೊಬೈಲ್ ನಂಬರ್ ಅನ್ನು ನಮೂದಿಸಿ ಸಕ್ರಿಯಗೊಳಿಸಲು ಓಟಿಪಿ ನಮೂದಿಸಬೇಕು. ಮೊಬೈಲ್ ಆಪ್‌ನಲ್ಲಿ ಮೊದಲು ಮಾಸ್ಟರ್ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ನಂತರ ತಮ್ಮ ಜಮೀನಿನ ಸರ್ವೆ ನಂಬರ್‌ಗಳನ್ನು ಸೇರಿಸಿಕೊಳ್ಳಬೇಕು. ಮುಂದಿನ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ, ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಬಳಕೆಗೆ (ಕೊಟ್ಟಿಗೆ, ಕೃಷಿ ಹೊಂಡ, ಮನೆ ಇತರೆ) ಬಳಕೆಯಾದ ಪ್ರದೇಶದ ವಿವರಗಳನ್ನು ಸಹ ದಾಖಲಿಸಬೇಕಾಗುತ್ತದೆ. ರೈತರು ತಾವು ಬೆಳೆದ ಪ್ರತಿ ಬೆಳೆಯ ವಿಸ್ತೀರ್ಣದ ಜೊತೆಗೆ ಪ್ರತಿ ಬೆಳೆಯ ಎರಡು ಛಾಯಚಿತ್ರಗಳನ್ನು ಸೆರೆ ಹಿಡಿದು ಅಪ್ಲೋಡ್ ಮಾಡಬೇಕು. ಹೀಗೆ ಅಪ್ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು (ಮೇಲ್ವಿಚಾರಕರು) ಪರಿಶೀಲಿಸಿ ರೈತರು ದಾಖಲಿಸಿದ ಬೆಳೆ ವಿವರಕ್ಕೂ, ಛಾಯಚಿತ್ರಕ್ಕೂ ತಾಳೆ ಹೊಂದಿದಲ್ಲಿ ಮಾತ್ರ ಬೆಳೆ ವಿವರವನ್ನು ಅನುಮೋದಿಸುತ್ತಾರೆ. ಒಂದು ವೇಳೆ ರೈತರು ತಮ್ಮ ಸ್ನೇಹಿತರು ಅಥವಾ ಸಂಬAಧಿಕರಿಗೆ ಸಹಾಯ ಮಾಡುವುದಾದರೆ ಅವರ ಸರ್ವೆ ನಂಬರ್‌ಗಳನ್ನು ಸಹ ತಮ್ಮ ಮೊಬೈಲ್ ಆಪ್‌ನಲ್ಲಿ ಸೇರಿಸಿಕೊಂಡು ಅವರ ಜಮೀನಿನ ವಿವರ ದಾಖಲಿಸಲೂ ಸಹ ಮೊಬೈಲ್‌ಆಪ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. *ಉಪಯೋಗ:* ಹೀಗೆ ಸಂಗ್ರಹಿಸಲಾದ ಬೆಳೆ ಸಮೀಕ್ಷೆ ಮಾಹಿತಿಯನ್ನು ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ಅಡಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ. ಅದೇರೀತಿಯಾಗಿ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಹಾಗೂ ಮುಂತಾದ ಸರ್ಕಾರದ ಯೋಜನೆಗಳಿಗೆ ಬಳಸಲಾಗುತ್ತದೆ. ಹಾಗಾಗಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ತಾವೇ ಸರ್ಕಾರಕ್ಕೆ ನಿಗಧಿತ ಸಮಯದೊಳಗೆ ವರದಿ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಕಂದಾಯ, ಕೃಷಿ, ತೋಟಗಾರಿಕೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ