ಸೋಮವಾರ, ಆಗಸ್ಟ್ 25, 2025
ಪೋಕ್ಸೋ ಕಾಯ್ದೆ ಅನುಷ್ಠಾನ; ಕಲಬುರಗಿ ವಿಭಾಗೀಯ ಮಟ್ಟದ ಸಮಾಲೋಚನಾ ಸಭೆಯಲ್ಲಿ ಜಿಪಂ ಸಿಇಒ ಅಭಿಮತ | ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ತಡೆಗಟ್ಟಲು ಅಧಿಕಾರಿಗಳ ಸಹಕಾರ ಅಗತ್ಯ: ಮಹಮ್ಮದ್ ಹಾರಿಸ್ ಸುಮೇರ್
ಬಳ್ಳಾರಿ,ಆ.24(ಕರ್ನಾಟಕ ವಾರ್ತೆ):
ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ವಿವಿಧ ಇಲಾಖೆಗಳ ಪರಸ್ಪರ ಸಹಕಾರ ಮತ್ತು ಸಹಯೋಗದೊಂದಿಗೆ ಕಾರ್ಯನಿರ್ವಹಿಸಬೇಕಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್ ಅವರು ಹೇಳಿದರು.
ಶನಿವಾರ, ನಗರದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಳ್ಳಾರಿ ಹಾಗೂ ಎನ್‍ಪೋಲ್ಡ್ ಪ್ರೋಅಕ್ಟಿವ್ ಹೆಲ್ತ್ ಟ್ರಸ್ಟ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು, ವಿಶೇಷ ಮಕ್ಕಳ ಪೊಲೀಸ್ ಘಟಕ, ಸರ್ಕಾರಿ ಅಭಿಯೋಜಕರು, ವೈದ್ಯಾಧಿಕಾರಿಗಳು, ಬಾಲಮಂದಿರದ ಅಧೀಕ್ಷಕರು, ಕಾನೂನು ಪರಿವೀಕ್ಷಾಣಾಧಿಕಾರಿಗಳು, ಬೆಂಬಲ ವ್ಯಕ್ತಿಗಳು ಮತ್ತು ಸ್ವಯಂಸೇವಾ ಸಂಸ್ಥೆಯ ಮುಖ್ಯಸ್ಥರಿಗೆ ಹಮ್ಮಿಕೊಂಡಿದ್ದ ಒಂದು ದಿನದ ಸಮಾಲೋಚನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ರಕ್ಷಣೆಗೆ ಹಲವಾರು ಇಲಾಖೆಗಳು ಸಹಭಾಗಿದಾರರಾಗಿ ಕಾರ್ಯನಿರ್ವಹಿಸುತ್ತಿವೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿಗಳು ರಚಿಸಿದ್ದು, ಅವುಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.
ಸ್ಥಳೀಯ ಪಂಚಾಯತಿಯ ಸಂಬಂಧಿತ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡುವ ಮೂಲಕ ಮಕ್ಕಳ ಹಾಜರಾತಿ ಮತ್ತು ಸುರಕ್ಷತೆ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿಶೇಷ ಮಕ್ಕಳ ಪೊಲೀಸ್ ಘಟಕ, ಶಿಕ್ಷಣ ಇಲಾಖೆ ಜೊತೆಗೂಡಿ ಶಾಲೆಯಲ್ಲಿರುವ ಸೌಲಭ್ಯಗಳನ್ನು ಬಳಸಿಕೊಂಡು ಆನ್‍ಲೈನ್ ಮೂಲಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ ಅವರು ಮಾತನಾಡಿ, ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳು ಕಂಡುಬಂದ ಕೂಡಲೇ ಅಧಿಕಾರಿಗಳು ಎಫ್.ಐ.ಆರ್ ದಾಖಲಿಸಬೇಕು. ಪೋಕ್ಸೋ ಕಾಯ್ದೆಯು ಒಂದು ವಿಶಿಷ್ಟ ಕಾಯ್ದೆಯಾಗಿದ್ದು, ಈ ಕಾಯ್ದೆಯಡಿ ಅಪರಾಧಿಗಳಿಗೆ 3 ವರ್ಷದಿಂದ ಜೀವಾವಧಿ ಶಿಕ್ಷೆಗೆ ಅವಕಾಶವಿದೆ ಎಂದು ತಿಳಿಸಿದರು.
ಪೋಕ್ಸೋ ಕಾಯ್ದೆಯ ಕುರಿತು ಜನರಿಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಹಾಗಾಗಿ ಇಲಾಖೆಗಳ ನಡುವೆ ಉತ್ತಮ ಸಂವಹನ ಮತ್ತು ಸಹಯೋಗದ ಅವಶ್ಯಕತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್.ಎಂ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮ ಮತ್ತು ಪಟ್ಟಣಗಳ ಸ್ಥಳೀಯ ಆಡಳಿತ ಸಂಸ್ಥೆಗಳು ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಪೋಕ್ಸೋ ಪ್ರಕರಣಗಳನ್ನು ಉತ್ತಮವಾಗಿ ನಿರ್ವಹಿಸಲು ಈ ಕಾಯ್ದೆಯ ವಿವಿಧ ಆಯಾಮಗಳ ಕುರಿತು ಅರಿತುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾ ದೇವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳ ಮೂಲಕ ಎಲ್ಲಾ ಇಲಾಖೆಗಳು ಶ್ರಮಿಸುತ್ತಿದ್ದರೂ, ಇನ್ನೂ ಮಕ್ಕಳ ಮೇಲೆ ದೌರ್ಜನ್ಯ, ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ. ಮುಖ್ಯವಾಗಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದರಿಂದ ಇವುಗಳನ್ನು ತಡೆಗಟ್ಟಲು ಮತ್ತು ಸಂತ್ರಸ್ತರಿಗೆ ತುರ್ತಾಗಿ ನೆರವು ನೀಡುವಲ್ಲಿ ಎಲ್ಲಾ ಸಹಭಾಗಿ ಇಲಾಖೆಗಳು ಒಟ್ಟಾಗಿ ಕಾರ್ಯನಿರ್ವಹಿಸುವುದು ಅವಶ್ಯಕವಾಗಿದೆ ಎಂದು ತಿಳಿಸಿದರು.
ಎನ್‍ಪೋಲ್ಡ್ ಸಂಸ್ಥೆಯ ಮುಖ್ಯಸ್ಥರಾದ ಖುಷಿ ಕುಶಲಪ್ಪ ಮತ್ತು ಪೊಲೀಸ್ ತರಬೇತಿ ಸಂಪನ್ಮೂಲ ವ್ಯಕ್ತಿ ರೋಹಿತ್ ಕಾರ್ಯಕ್ರಮದ ಧ್ಯೇಯೋದ್ದೇಶ ತಿಳಿಸಿಕೊಟ್ಟರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ ನಿರೂಪಿಸಿದರು. ಈಶ್ವರ್ ರಾವ್ ಸ್ವಾಗತಿಸಿದರು. ಚನ್ನಬಸಪ್ಪ ವಂದಿಸಿದರು.
ಈ ಸಂದರ್ಭದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ನವೀನ್‍ಕುಮಾರ್, ಉಪ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ನಂದಾರೆಡ್ಡಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮೀ ಮೈದೂರು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಲ್ಲಾ ರಮೇಶ್‍ಬಾಬು ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು, ಎನ್‍ಫೋಲ್ಡ್ ಸಂಸ್ಥೆಯ ಸಿಬ್ಬಂದಿಗಳು, ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 80ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
========
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ