ಗುರುವಾರ, ಫೆಬ್ರವರಿ 19, 2026
ಜೀತ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ: ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ,ಫೆ.19(ಕರ್ನಾಟಕ ವಾರ್ತೆ):
ಜೀತ ಕಾರ್ಮಿಕ ಪದ್ಧತಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಈ ಕಾಯ್ದೆ ಉಲ್ಲಂಘಿಸುವವರು ಶಿಕ್ಷೆಗೆ ಒಳಗಾಗುತ್ತಾರೆ. ಇವುಗಳನ್ನು ಬುಡ ಸಮೇತ ಕಿತ್ತೊಗೆಯಲು ಇಲಾಖೆಗಳೊಂದಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಜೀತ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ, ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಕಾರಣಕ್ಕೂ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳಬಾರದು. ಅವರನ್ನು ಶಿಕ್ಷಣವಂತರನ್ನಾಗಿ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಜೀತ ಕಾರ್ಮಿಕ ಪದ್ಧತಿ, ಬಾಲಕಾರ್ಮಿಕ ಪದ್ಧತಿಗಳು ಕಂಡುಬAದರೆ ತಕ್ಷಣವೇ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಗಮನಕ್ಕೆ ತಂದರೆ ಅಂತಹ ಪ್ರಕರಣಗಳನ್ನು ತಡೆಗಟ್ಟಿ ತಪ್ಪಿಸ್ಥತರನ್ನು ಶಿಕ್ಷೆಗೆ ಒಳಪಡಿಸಲಾಗುವುದು ಎಂದರು.
ಜೀತ ಪದ್ಧತಿ, ಬಾಲಕಾರ್ಮಿಕ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆಗೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯ ಹಾಗೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತಾಗಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುವುದು ಕಾನೂನು ಬಾಹಿರವಾಗಿದೆ. ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.
ಸಂವಿಧಾನವು ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಹಕ್ಕು ನೀಡಿದೆ. ಸರ್ಕಾರವು ಶಿಕ್ಷಣ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಇವುಗಳ ಸದ್ಬಳಕೆಯಾಗಬೇಕು ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್ ಅವರು ಭಾಗವಹಿಸಿ ಜೀತ ಕಾರ್ಮಿಕ ಪದ್ಧತಿ ವಿರೋಧಿ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್, ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು, ಮತ್ತಿತರರು ಉಪಸ್ಥಿತರಿದ್ದರು.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ