ಮಂಗಳವಾರ, ಜೂನ್ 16, 2026
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ | ಪ್ರತಿಯೊಬ್ಬ ಅರ್ಹರಿಗೂ ಸಿಗಲಿ ಮತದಾನದ ಹಕ್ಕು: ಜವಾಬ್ದಾರಿಯುತ ಕಾರ್ಯಕ್ಕೆ ಡಿಸಿ ನಾಗೇಂದ್ರ ಪ್ರಸಾದ್.ಕೆ ಕರೆ
ಬಳ್ಳಾರಿ,ಜೂ.16(ಕರ್ನಾಟಕ ವಾರ್ತೆ):
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸೂಚಿಸಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ, 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತಗಟ್ಟೆ ಅಧಿಕಾರಿಗಳು, ಮತಗಟ್ಟೆ ಮೇಲ್ವಿಚಾರಕರು ಹಾಗೂ ನೋಡಲ್ ಅಧಿಕಾರಿಗಳಿಗೆ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಈ ವಿಶೇಷ ತೀವ್ರ ಪರಿಷ್ಕರಣೆಯ ಮುಖ್ಯ ಉದ್ದೇಶ ಕೇವಲ ಹೆಸರುಗಳನ್ನು ತೆಗೆದುಹಾಕುವುದು ಅಲ್ಲ, ಬದಲಿಗೆ ಅರ್ಹರನ್ನು ಸೇರ್ಪಡೆಗೊಳಿಸುವುದು ಮತ್ತು ದೋಷಮುಕ್ತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದಾಗಿದೆ ಎಂದು ತಿಳಿಸಿದರು.
ಎಸ್‌ಐಆರ್ ಪ್ರಕ್ರಿಯೆಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಚುನಾವಣಾ ಆಯೋಗವು ವಿಧಿ-ವಿಧಾನಗಳನ್ನು ರೂಪಿಸಿದೆ. ಮನೆ-ಮನೆ ಸಮೀಕ್ಷೆ ಮತ್ತು ಗಣತಿ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ನೇಮಿಸಿರುವ ಬೂತ್ ಮಟ್ಟದ ಏಜೆಂಟರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಮತದಾರರಿಗೆ ಗಣತಿ ನಮೂನೆಯನ್ನು ನೀಡಲಾಗುತ್ತದೆ. ಇದರಲ್ಲಿ ಎರಡು ಪ್ರತಿಗಳಿರುತ್ತವೆ—ಒಂದನ್ನು ಮತದಾರರು ತಮ್ಮ ಬಳಿ ಇಟ್ಟುಕೊಳ್ಳಬೇಕು, ಮತ್ತೊಂದನ್ನು ಅಧಿಕಾರಿಗಳಿಗೆ ನೀಡಬೇಕು ಎಂದರು.
ಮತದಾನ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆಯನ್ನು ಮತ್ತಷ್ಟು ಪಾರದರ್ಶಕ ಹಾಗೂ ಸುಲಭಗೊಳಿಸಲು ತರಲಾಗಿರುವ ಎಸ್‌ಐಆರ್ ತಂತ್ರಾAಶ/ವ್ಯವಸ್ಥೆಯ ಕುರಿತು ಸವಿಸ್ತಾರವಾದ ಮಾಹಿತಿ ಹೊಂದಬೇಕು. ಈ ವ್ಯವಸ್ಥೆಯನ್ನು ಕ್ಷೇತ್ರ ಮಟ್ಟದಲ್ಲಿ ಹೇಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಮತ್ತು ತಾಂತ್ರಿಕ ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದನ್ನು ಅಧಿಕಾರಿಗಳು ಮನವರಿಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಪ್ರಕ್ರಿಯೆಯಲ್ಲಿ ಯಾವುದೇ ಆಕ್ಷೇಪಣೆಗಳು ಅಥವಾ ದೂರುಗಳಿದ್ದಲ್ಲಿ, ಜಿಲ್ಲಾಧಿಕಾರಿಗಳು ಅಂತಿಮ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಅವರು ತಿಳಿಸಿದರು.
ತರಬೇತಿ ನಡೆಯುತ್ತಿದ್ದ ಎಲ್ಲಾ ಕೊಠಡಿಗಳಿಗೂ ಖುದ್ದಾಗಿ ಭೇಟಿ ನೀಡಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು, ಅಧಿಕಾರಿಗಳಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಮತಗಟ್ಟೆ ಅಧಿಕಾರಿಗಳ ಕರ್ತವ್ಯಗಳು, ತಪ್ಪುಗಳಿಲ್ಲದ ಮತದಾರರ ಪಟ್ಟಿ ಸಿದ್ಧಪಡಿಸುವುದು ಮತ್ತು ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡುವುದು ಸೇರಿದಂತೆ ಪರಿಷ್ಕರಣಾ ಪ್ರಕ್ರಿಯೆಯ ವಿವಿಧ ಹಂತಗಳ ಬಗ್ಗೆ ತರಬೇತಿಯಲ್ಲಿ ಸಂಪೂರ್ಣವಾಗಿ ವಿವರಿಸಲಾಯಿತು.
ಈ ಸಂದರ್ಭದಲ್ಲಿ 94-ಬಳ್ಳಾರಿ ನಗರ ಕ್ಷೇತ್ರ ನೋಂದಣಾಧಿಕಾರಿ ಆದ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಪಾಲಿಕೆಯ ಉಪ-ಆಯುಕ್ತ ನಂದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಮತ್ತು ಚುನಾವಣಾ ಶಾಖೆಯ ಅಧಿಕಾರಿಗಳು ಸೇರಿದಂತೆ ಕ್ಷೇತ್ರ ಮಟ್ಟದ ಅಧಿಕಾರಿಗಳು ಈ ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮಾಹಿತಿ ಪಡೆದುಕೊಂಡರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)







ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ