ಬುಧವಾರ, ಜೂನ್ 10, 2026
ಸಂಡೂರು: ಮತಗಟ್ಟೆ ಅಧಿಕಾರಿಗಳ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಭೇಟಿ, ಅಗತ್ಯ ನಿರ್ದೇಶನ
ಬಳ್ಳಾರಿ,ಜೂ.10(ಕರ್ನಾಟಕ ವಾರ್ತೆ):
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ಮತ್ತು ಮತಗಟ್ಟೆ ಮೇಲ್ವಿಚಾರಕರಿಗೆ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆದ ನಾಗೇಂದ್ರ ಪ್ರಸಾದ್.ಕೆ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು.
ಸಂಡೂರು ಪಟ್ಟಣದ ಕುಮಾರಸ್ವಾಮಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಂಡ ಜಿಲ್ಲಾಧಿಕಾರಿಯವರು, ಎಸ್‌ಐಆರ್ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸುವ ಕುರಿತು ಅಧಿಕಾರಿಗಳಿಗೆ ಅಗತ್ಯ ಮಾಹಿತಿ ಮತ್ತು ಮಹತ್ವದ ನಿರ್ದೇಶನಗಳನ್ನು ನೀಡಿದರು.
ಎಸ್‌ಐಆರ್ ಪ್ರಕ್ರಿಯೆಯ ಕರ್ತವ್ಯದಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಆಸ್ಪದ ನೀಡಬಾರದು. ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿಯೂ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಎದುರಾಗಬಹುದಾದ ಸವಾಲುಗಳನ್ನು ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ಸ್ಪಷ್ಟ ಜ್ಞಾನ ಹೊಂದಿರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿಗಳೇ ಖುದ್ದಾಗಿ ಸ್ಥಳಕ್ಕೆ ಆಗಮಿಸಿ, ತರಬೇತಿಯ ಗುಣಮಟ್ಟವನ್ನು ಪರಿಶೀಲಿಸಿದ್ದಲ್ಲದೆ, ಅಧಿಕಾರಿಗಳ ಅನುಮಾನಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿದರು.
ತರಬೇತಿ ಕಾರ್ಯಾಗಾರದಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ನೋಡೆಲ್ ಅಧಿಕಾರಿ ಆದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ತಹಶೀಲ್ದಾರ ಅನಿಲ್ ಕುಮಾರ್, ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ನಿರಂಜನ ಸೇರಿದಂತೆ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ